

ಹಾಸನ: ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.
ತಣ್ಣೀರುಹಳ್ಳಿ ರಸ್ತೆಯಲ್ಲಿರುವ ಎಸ್‌ಡಿಎಂ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಅವರು ಅಲ್ಲಿನ ವ್ಯವಸ್ಥೆ ಪರಿಶೀಲಿಸಿ ಮಾತನಾಡಿದರು. ಯಾವುದೇ ರೋಗ ಲಕ್ಷಣಗಳಿಲ್ಲದೆ ಇರುವ ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡುವ ಸಲುವಾಗಿ ನಗರದ ಧರ್ಮಸ್ಥಳ ಆಯುರ್ವೇದ ಕಾಲೇಜಿನ ಪ್ರತ್ಯೇಕ ಕಟ್ಟಡವೊಂದರಲ್ಲಿ 300 ಹಾಸಿಗೆಯ ಕೋವಿಡ್ ಕೇರ್ ಕೇಂದ್ರ ಪ್ರಾರಂಭಿಸಲಾಗಿದೆ. ಪ್ರತ್ಯೇಕ ಕೊಠಡಿ, ವ್ಯವಸ್ಥಿತ ಶೌಚಗೃಹ, ವೈದ್ಯರ ವಿಶ್ರಾಂತಿ ಕೊಠಡಿ, ಧ್ವನಿವರ್ಧಕ ವ್ಯವಸ್ಥೆ ಲಭ್ಯವಿದೆ. ಧರ್ಮಸ್ಥಳ ಆಯುರ್ವೇದ ಕಾಲೇಜು ಸಂಸ್ಥೆ ತನ್ನ ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್ ಅನ್ನು ಈ ಸೌಲಭ್ಯಕ್ಕಾಗಿ ಜಿಲ್ಲಾಡಳಿತಕ್ಕೆ ಬಿಟ್ಟುಕೊಟ್ಟಿದೆ ಎಂದರು.
ಹೆಚ್ಚುವರಿ 300 ಬೆಡ್‌ಗಳ ಆಸ್ಪತ್ರೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸಾಕಾಗುತ್ತದೆ. ಆಸ್ಪತ್ರೆಗೆ ಅಗತ್ಯವಿರುವ ಸೌಲಭ್ಯ ಹಾಗೂ ತಜ್ಞ ವೈದ್ಯರ ಸೇವೆ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿಗೆ ಹೇಳಿದರು.
ಕರೊನಾ ಸೋಂಕಿನ ಯಾವುದೇ ಲಕ್ಷಣ ಕಂಡು ಬರುವ ರೋಗಿಗಳಿಗಾಗಿ ಇಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗುತ್ತಿದೆ. ಚಿಕಿತ್ಸೆ ನೀಡಿ ಗುಣಮುಖರಾದವರನ್ನು ಮನೆಗೆ ಕಳುಹಿಸಲಾಗುತ್ತದೆ. ಪರಿಸ್ಥಿತಿ ವಿಷಮವಾದಲ್ಲಿ ಅಂತಹವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ ಎಂದರು.
ಕೋವಿಡ್ ಸೋಂಕಿತರಿಗಾಗಿ ಪ್ರತ್ಯೇಕ ಕೊಠಡಿಗಳನ್ನು ಮಾಡಲಾಗಿದ್ದು, ಒಂದು ಕೊಠಡಿಯಲ್ಲಿ ಇಬ್ಬರಿಂದ ಮೂವರು ಚಿಕಿತ್ಸೆ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ವೈದ್ಯರ ವ್ಯವಸ್ಥೆ ಮಾಡಲಾಗಿದೆ. ಶ್ರೀ ಧರ್ಮಸ್ಥಳ ಆರೋಗ್ಯ ಸಂಸ್ಥೆ ಸಿಬ್ಬಂದಿಯೂ ಸಹಕರಿಸಲಿದ್ದಾರೆ ಎಂದು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್‌ಕುಮಾರ್, ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ.ಪ್ರಸನ್ನ ನರಸಿಂಹರಾವ್, ಡಾ.ಮುರುಳೀಧರ್ ಪೂಜಾರ್ ಇತರರಿದ್ದರು.