ಬಸವಣ್ಣನವರಿಗೆ ವಿಶ್ವಗುರು ಬಿರುದು ಹೆಮ್ಮೆ ವಿಚಾರ

6
Published on

ಮೈಸೂರು: ಸಮ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಣ್ಣನವರಿಗೆ ವಿಶ್ವಗುರು ಎಂಬ ಬಿರುದನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅನುಷ್ಠಾನಗೊಳಿಸಿರುವುದು ಮೈಸೂರಿನವರಾದ ನಮಗೆ ಹೆಮ್ಮೆ ವಿಚಾರ ಎಂದು ಶಾಸಕ ಕೆ. ಹರೀಶ್‌ಗೌಡ ತಿಳಿಸಿದರು.

ಜಿಲ್ಲಾಡಳಿತ ಮೈಸೂರು, ಜಿಲ್ಲಾ ಪಂಚಾಯಿತಿ, ಮೈಸೂರು ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭದಲ್ಲಿ ಮಾತನಾಡಿ, ಇಂದಿನಿಂದ ಮೈಸೂರಿನಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳಲ್ಲೂ ವಿಶ್ವಗುರು ಬರಹವಿರುವ ಭಾವಚಿತ್ರಗಳು ಇರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮನುಷ್ಯರ ನಡುವಿನ ಸಮಾನತೆಗಾಗಿ ಕ್ರಾಂತಿ ಮಾಡಿದ ಬಸವಣ್ಣನವರು ವಚನಗಳ ಮೂಲಕವೇ ಸಮ ಸಮಾಜವನ್ನು ನಿರ್ಮಾಣ ಮಾಡಲು ಮುಂದಾದರು. ಇಂತಹ ವಚನಗಳನ್ನು ಯುವಕರು ಹಾಗೂ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅನುಸರಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಬಸವಣ್ಣನವರನ್ನು ವಿಶ್ವಗುರು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿರುವುದು ಸ್ವಾಗತಾರ್ಹ ಕ್ರಮ. 12ನೇ ಶತಮಾನದಲ್ಲಿಯೇ ಅನುಭವ ಮಂಟಪವನ್ನು ಸ್ಥಾಪಿಸಿ ಎಲ್ಲ ಸಮಾಜದವರನ್ನು ಒಂದುಗೂಡಿಸುವ ಮೂಲಕ ಸಮ ಸಮಾಜದ ನಿರ್ಮಾಣಕ್ಕಾಗಿ ಬಸವಣ್ಣ ತಮ್ಮ ಬದುಕನ್ನೇ ಮೂಡಿಪಾಗಿಟ್ಟಿದ್ದಾರೆ. ಆದರೆ, ಅವರ ತತ್ವ-ಆದರ್ಶಗಳನ್ನು ಅಳವಡಿಸುತ್ತಿರುವವ ಸಂಖ್ಯೆ ಕಡಿಮೆ ಇದೆ. ಇಂದು ಅನೇಕರು ಮೌಢ್ಯ, ಕಂಡಚಾರಗಳಿಗೆ ಒಳಗಾಗಿ ಪ್ರೀತಿ - ಸಹಬಾಳ್ವೆ ಮರೆತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಜಿಪಂ ಸಿಇಒ ಕೆ.ಎಂ ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ.ಡಿ.ಸುದರ್ಶನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net