

ಗುಂಡ್ಲುಪೇಟೆ: ಈ ಬಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲೆ ಹಾಗೂ ಕ್ಷೇತ್ರದ ಮತದಾರರು ಅಧಿಕ ಬಹುಮತಗಳಿಂದ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಅತ್ಯಧಿಕ ಮತಗಳನ್ನು ನೀಡಿ ಗೆಲ್ಲಿಸಿರುವುದು ಕ್ಷೇತ್ರದ ಅಭಿವೃದ್ಧಿಗೆ ನೆರವಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಬುಧವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿ, ಈ ಬಾರಿ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ಕಳೆದ ಸಾಲಿನಲ್ಲಿ ನಮ್ಮಿಂದ ಕೈಬಿಟ್ಟು ಹೋಗಿದ್ದ ಲೋಕಸಭಾ ಕ್ಷೇತ್ರವನ್ನು ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಲಕ್ಷಾಂತರ ಮತಗಳ ಅಂತರದಲ್ಲಿ ಅಧಿಕ ಬಹುಮತದಿಂದ ಆರಿಸಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಸಧ್ಯದಲ್ಲಿಯೇ ತಾಲೂಕಿನ ಕೆರೆಗಳಿಗೆ ನದಿಮೂಲದಿಂದ ನೀರು ತುಂಬಿಸುವ 490 ಕೋಟಿ ರೂ. ವೆಚ್ಚದ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಜಿಪಂ ಮಾಜಿ ಸದಸ್ಯರಾದ ಕೆ.ಎಸ್.ಮಹೇಶ್, ಕೆರೆಹಳ್ಳಿ ನವೀನ್, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಎಂ.ಮುನಿರಾಜು. ಪಿ.ಬಿ.ರಾಜಶೇಖರ, ಮುಖಂಡರು ಇದ್ದರು.