

ಮೈಸೂರು: ಬಿಜೆಪಿಯಲ್ಲಿ ನಾನು ಯಾವುದೇ ಸ್ಥಾನಮಾನವನ್ನು ಬಯಸಿರಲಿಲ್ಲ, ನನ್ನ ಕೆಲಸಕ್ಕೆ ತಕ್ಕ ಗೌರವವನ್ನು ಮಾತ್ರ ನೀರಿಕ್ಷೆ ಮಾಡಿದ್ದೆ. ಆದರೆ, ಬಿಜೆಪಿಯಿಂದ ಸೂಕ್ತ ಗೌರವ ದೊರೆಯದ ಹಿನ್ನೆಲೆಯಲ್ಲಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಹೇಳಿದರು.
ನಗರದ ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಬುಧವಾರ ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬೆಂಬಲಿಗರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಚುನಾವಣೆಯಲ್ಲಿ ನೀಡಿದ್ದ ಪಂಚ ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿಸಿದ್ದಾರೆ. ಇದನ್ನು ಚುನಾವಣಾ ಘೋಷಣೆ ಎಂದು ಹಲವರು ಟೀಕಿಸಿದ್ದರು. ಆದರೆ ಇದು ಚುನಾವಣಾ ಘೋಷಣೆಯಲ್ಲ ಎಂಬುದನ್ನು ಸಿದ್ದರಾಮಯ್ಯ ತೋರಿಸಿಕೊಟ್ಟಿದ್ದಾರೆ. ಗ್ಯಾರಂಟಿ ಯೋಜನೆ ದೊರೆಯದವರನ್ನು ಗುರುತಿಸಿ ಅವರಿಗೂ ಯೋಜನೆ ಲಾಭ ದೊರೆಯುವಂತೆ ಮಾಡುತ್ತೇನೆ ಎಂದರು.
ನಾನು ಲಾಭಕೋಸ್ಕರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತನಾಗಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುತ್ತೇನೆ ಎಂದರು.
ನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದವರು. ನನ್ನಂತವರಿಗೆ ಶಕ್ತಿ ತುಂಬಿದವರು ಸಿದ್ದರಾಮಯ್ಯ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡುತ್ತೇನೆ ಎಂದು ಹೇಳಿದರು.