

ರಾಯಚೂರು: ಯುವಜನತೆ ಸ್ವಾಮಿ ವಿವೇಕಾನಂದ ಚಿಂತನೆಗಳನ್ನು ಮೈಗೂಡಿಸಿಕೊಂಡು ದುಶ್ಚಟಗಳಿಂದ ದೂರವಾಗಿ ದೇಶ ಕಟ್ಟುವ ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಸಲಹೆ ನೀಡಿದರು.
ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ರಹ್ಮಕುಮಾರಿ ಈಶ್ವರಿಯ ಮಹಾವಿದ್ಯಾಲಯದಿಂದ ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಸಾಸಲು ಸಾಧ್ಯವಿದ್ದು, ಎಲ್ಲರಿಗೂ ದೇಶ ಮೊದಲು ಎನ್ನುವ ಮನೋಭಾವ ಬರಬೇಕಾಗಿದೆ ಎಂದರು.
ಜಗತ್ತಿನಲ್ಲಿ ಅಭಿವೃದ್ಧಿಯಲ್ಲಿ ಭಾರತ ಐದನೇ ರಾಷ್ಟ್ರವಾಗಿ ಹೊರಹೊಮ್ಮಲು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ. ಜಿಲ್ಲೆಯಲ್ಲಿ ಪ್ರಮುಖ ರಾಷ್ಟ್ರಿಯ ಹೆದ್ದಾರಿಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದು, ಭವಿಷ್ಯದಲ್ಲಿ ಸಂಪರ್ಕದಲ್ಲಿ ಜಿಲ್ಲೆ ಅಭಿವೃದ್ಧಿಯತ್ತ ದಾಪುಗಾಲು ಇಡಲಿದೆ.
ವಿಕಸಿತ ಭಾರತ ಕಾರ್ಯಕ್ರಮದ ಮೂಲಕ 2.70 ಲಕ್ಷ ಗ್ರಾಮ ಪಂಚಾಯಿತಿಗಳು ಹಾಗೂ 3 ಸಾವಿರಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸಲು ಜಾಗೃತಿ ಮೂಡಿಸುವ ಕಾರ್ಯ ಪ್ರಾರಂಭಿಸಲಾಗಿದೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿದೆ ಎಂದು ರಾಜಾ ಅಮರೇಶ್ವರ ನಾಯಕ ಹೇಳಿದರು.
ಬ್ರಹ್ಮಕುಮಾರಿ ಈಶ್ವರಿಯ ಮಹಾವಿದ್ಯಾಲಯದ ಮುಖ್ಯಸ್ಥೆ ಸ್ಮೀತಾ ಅಕ್ಕ ಮಾತನಾಡಿ, ಸ್ವಾಮಿ ವಿವೇಕಾನಂದರು ಯುವಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಅವರನ್ನು ದೇಶದ ಶಕ್ತಿಯನ್ನಾಗಿ ಮಾಡಲು ಪ್ರಯತ್ನಿಸಿದ್ದರು. ಅವರ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಯುವಜನತೆ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಕಾಲ್ನಡಿಗೆ ಜಾಥಾ ನಗರದ ಪ್ರಮುಖ ಬೀದಿಗಳ ಮೂಲಕ ಬ್ರಹ್ಮಕುಮಾರಿ ಈಶ್ವರಿಯ ಮಹಾವಿದ್ಯಾಲಯದಲ್ಲಿ ಕೊನೆಗೊಂಡಿತು. ಜಾಥಾದಲ್ಲಿ ನಗರದ ಸುಮಾರು 15ಕ್ಕೂ ಹೆಚ್ಚು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಯುವಜನಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ಆರ್‌ಡಿಎ ಆಯುಕ್ತ ಮಹ್ಮದ್ ಜಿಲಾನಿ, ವಕ್ ಬೋರ್ಡ್ ಅಧ್ಯಕ್ಷ ಸೈಯದ್ ಮುಕ್ತಿಯಾರ್, ಪೂರ್ಣಿಮಾ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಖಾ ಕೇಶವರೆಡ್ಡಿ, ಎಸ್‌ಕೆಇ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಬಾಬುರಾವ್ ಶೇಗುಣಸಿ ಉಪಸ್ಥಿತರಿದ್ದರು.