

ವಿಜಯವಾಣಿ ಸುದ್ದಿಜಾಲ ಕಡಬ
ಬ್ಯಾಂಕ್ ಆಫ್ ಬರೋಡಾ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ವತಿಯಿಂದ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಯ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಪ್ರತಿಷ್ಠಾನದ ವತಿಯಿಂದ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾದ ಪ್ರಿಂಟರ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಕೊಡುಗೆಗಳನ್ನು ಹಸ್ತಾಂತರಿದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ರಾಜೇಂದ್ರ ರೈ ಬೆಳ್ಳಿಪ್ಪಾಡಿ ಮಾತನಾಡಿ, ಮನುಷ್ಯನಿಗೆ ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಇಲ್ಲ. ಜನರ ಆರೋಗ್ಯವನ್ನು ಕಾಪಾಡಲು ಕೊಡುಗೆ ನೀಡುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ ಕೂಡ ತಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕೆಂಬ ಉದ್ದೇಶದಿಂದ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದರು.
ಕಡಬ ಸಮುದಾಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ವಿ.ಕೆ.ಅಧ್ಯಕ್ಷತೆ ವಹಿಸಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ.ಶುಭಹಾರೈಸಿದರು. ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ರೆಂಜಿಲಾಡಿ ಗ್ರಾಮ ಸಮಿತಿ ಅಧ್ಯಕ್ಷ ವೆಂಕಟೇಶ್ ಪಾಡ್ಲ, ಆಸ್ಪತ್ರೆಯ ದಂತ ವೈದ್ಯೆ ಡಾ.ಪದ್ಮಶ್ರೀ, ಆಯುಷ್ ವೈದ್ಯೆ ಡಾ.ಅಶ್ವಥಿ ಉಪಸ್ಥಿತರಿದ್ದರು.
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಜೆಸಿಂತಾ ಕೆ.ವಿ.ಸ್ವಾಗತಿಸಿ, ವಂದಿಸಿದರು. ರೆಂಜಿಲಾಡಿ ಗ್ರಾಮದ ಸಮುದಾಯ ಆರೋಗ್ಯಾಧಿಕಾರಿ ಪೂರ್ಣಿಮಾ ನಿರೂಪಿಸಿದರು.