

ಮೈಸೂರು: ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ 443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಪ್ರಶ್ನಿಸಿದರು.
ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಂಗಳವಾರ (ನ.12) ನೆರವೇರಿಸಿ,ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಮಾತನಾಡಿದರು.
ಇಂದು ಎಚ್.ಡಿ.ಕೋಟೆಯಲ್ಲಿ 443 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ್ದೇನೆ. ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದೇನೆ. ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನವನ್ನು ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಇದನ್ನು ಭಾರತದಲ್ಲಿ ಬೇರೆ ಯಾವ ಸರ್ಕಾರವೂ ಕೊಟ್ಟಿರಲಿಲ್ಲ ಎಂದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು. ಪರಿಶಿಷ್ಠ ವರ್ಗದ ಮಂತ್ರಿಯಾಗಿದ್ದ ನಾಗೇಂದ್ರ ಮೇಲೂ ಸುಳ್ಳು ಕೇಸು ಹಾಕಿದ್ದರು. ಈಗ ನಾಗೇಂದ್ರ ಜೈಲಿನಿಂದ ಹೊರಗೆ ಬಂದಿದ್ದಾರೆ. ಉಪ ಚುನಾವಣೆ ಮುಗಿದ ಬಳಿಕ ನಾಗೇಂದ್ರ ಸಚಿವ ಸ್ಥಾನದ ಬಗ್ಗೆ ಒಳ್ಳೆ ತೀರ್ಮಾನ ಮಾಡ್ತೀನಿ ಎಂದರು.
ನಮ್ಮ ಗ್ಯಾರಂಟಿಗಳಿಂದ ಅನುಕೂಲ ಪಡೆದವರು ನಮಗೆ ಮತ ಕೊಡಲಿ, ಬಿಡಲಿ ಆದರೆ ನಾವು ಬಡವರ ಕಲ್ಯಾಣಕ್ಕೆ ಕೆಲಸ ಮಾಡುವುದನ್ನು ಮಾತ್ರ ನಿಲ್ಲಿಸುವುದಿಲ್ಲ. ಬಡವರ ಪರ ಕೆಲಸ ಮಾಡುವುದು ನಮ್ಮ ಬದ್ಧತೆ ಎಂದರು.ವಾಲ್ಮೀಕಿ ಸಂಘದ ಬೇಡಿಕೆಯಂತೆ ಹೆಚ್.ಡಿ.ಕೋಟೆಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಿಸಿದರು.