

ಶಿವಮೊಗ್ಗ: ರಾಷ್ಟ್ರದ್ರೋಹಿ ಹೇಳಿಕೆ ಕೊಡುವಂತವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂಬ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಅಪಾರ್ಥ ಕಲ್ಲಿಸುವ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಈಶ್ವರಪ್ಪ ಹೇಳಿಕೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಅವರ ಹೇಳಿಕೆ ಬಗ್ಗೆ ಟೀಕೆ, ಟಿಪ್ಪಣಿ, ಅಪಾರ್ಥ ಕಲ್ಪಿಸುವ ಕೆಲಸವಾಗುತ್ತಿದೆ. ಈಶ್ವರಪ್ಪ ಅವರ ವಿರುದ್ಧ ಎಫ್‌ಐಆರ್ ಹಾಕಿರುವುದರಿಂದ ಯಾವುದೇ ತೊಂದರೆ ಇಲ್ಲ, ಅದನ್ನು ನಾವು ಎದುರಿಸುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಏನು ಬೇಕಾದರೂ ಹೇಳಿಕೆ ಕೊಡುತ್ತಾರೆ. ತಾನು ಹೇಳಿದ್ದೆ ಸರಿ ಅಂತಾ ಸಾಬೀತು ಮಾಡುವ ಪ್ರಯತ್ನ ಮಾಡುತ್ತಾರೆ. ಸಿದ್ದರಾಮಯ್ಯ ಶಾಸಕರನ್ನು ದೆಹಲಿಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡಿದ್ದನ್ನು ಖಂಡಿಸುತ್ತೇನೆ. ಸಿದ್ದರಾಮಯ್ಯ ದೆಹಲಿಗೆ ಹೋಗಿ ಪ್ರತಿಭಟನೆ ಮಾಡುವ ಮೂಲಕ ರಾಜಕೀಯ ಮಾಡಿದ್ದಾರೆ ಎಂದು ದೂರಿದರು.