ರಾಜ್ಯದಲ್ಲಿ ಒಮಿಕ್ರಾನ್ ಭೀತಿ ಇಲ್ಲ : ಆರೋಗ್ಯ ಸಚಿವ ಡಾ. ಸುಧಾಕರ್

Sudhakar
Published on

ಮೈಸೂರು: ಒಮಿಕ್ರಾನ್ ರೂಪಾಂತರ ತಳಿ ಕುರಿತು ಆತಂಕ ಪಡುವ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿಲ್ಲ. ಆದರೆ, ನಮ್ಮ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ರಾಜ್ಯದಲ್ಲಿ ಹರಡದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಹೇಳಿದರು.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ರೂಪಾಂತರಿ ತಳಿ ಅಮೆರಿಕದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಇದುವರೆಗೆ ಒಂದು ಪ್ರಕರಣ ಸಹ ವರದಿಯಾಗಿಲ್ಲ. ಈಗಾಗಲೇ ಗಡಿ ಜಿಲ್ಲೆಗಳಿಗೆ ಸರ್ಕಾರದಿಂದ ಮಾರ್ಗಸೂಚಿಯನ್ನು ನೀಡಲಾಗಿದೆ. ಮಾಸ್ಕ್ ಕಡ್ಡಾಯ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಆದಷ್ಟು ಬೇಗ ಜನರು ಕೋವಿಡ್ ಮೂರನೇ ಡೋಸ್ ಪಡೆಯುವುದು ಉತ್ತಮ ಎಂದರು.

ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಹಾಗೂ ಕೆ.ಆರ್.ಆಸ್ಪತ್ರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ 89 ಕೋಟಿ ರೂ. ಅನುದಾನ ನೀಡಿದ್ದು, ಈಗಾಗಲೇ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಮೈಸೂರಿಗೆ ಕ್ಯಾನ್ಸರ್ ಆಸ್ಪತ್ರೆಯನ್ನು ಮಂಜೂರು ಮಾಡಲಾಗುವುದು. ಒಟ್ಟು 130 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಗೊಳ್ಳಲಿದ್ದು, ಮೊದಲ ಹಂತದಲ್ಲಿ 50 ಕೋಟಿ ರೂ. ನೀಡಲಾಗುವುದು. ನಮ್ಮ ಕ್ಲೀನಿಕ್‌ಅನ್ನು ಜಿಲ್ಲೆಯಲ್ಲಿ ನವೆಂಬರ್ ತಿಂಗಳಲ್ಲಿ ಉದ್ಘಾಟಿಸಲಿದ್ದೇವೆ. ನಗರದ ಸೂಪರ್ ಸ್ಪೆಷ್ಟಾಲಿಟಿ ಆಸ್ಪತ್ರೆಗೆ ಸಿಬ್ಬಂದಿ ಹಾಗೂ ವೈದ್ಯರ ನೇಮಕಾತಿಗೆ ಅನುಮತಿ ನೀಡಲಾಗಿದ್ದು, ಆ ಆಸ್ಪತ್ರೆಯು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net