

ಮೈಸೂರು: ದೇಶದಲ್ಲಿ ಹಿಂಗಾರು ಮಳೆ ಸುರಿಯುತ್ತಿದ್ದು, ರೈತರಿಗೆ ಅಗತ್ಯವಾದ ರಸಗೊಬ್ಬರವನ್ನು ಕೇಂದ್ರ ಸರ್ಕಾರ ಪೂರೈಕೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ವಹಿಸಲಿದೆ. 2014ರ ನಂತರ ದೇಶದಲ್ಲಿ ರಸಗೊಬ್ಬರ ಕೊರತೆಯ ಸಮಸ್ಯೆಗಳು ಕಂಡು ಬಂದಿಲ್ಲ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆ ಹಾಗೂ ಕಚ್ಚಾವಸ್ತುಗಳ ಕೊರತೆಯಾದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ಹಿಂದೆ ಬಿದ್ದಿಲ್ಲ. ರಾಜ್ಯ ಸರ್ಕಾರಗಳಿಂದ ಬರುವ ಬೇಡಿಕೆಯ ಪ್ರಸ್ತಾವನೆಗೆ ಅಗುಣವಾಗಿ ರಸಗೊಬ್ಬರ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದರು.
ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಲು ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಾವಯವ ರಸಗೊಬ್ಬರ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.