

ಬೈಂದೂರು: ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಪರ್ಮಿಟ್ ಹೊಂದಿದ್ದರೂ ಕೆಎಸ್‌ಆರ್‌ಟಿಸಿ ಬಸ್ ಸೇವೆಯನ್ನು ಸ್ಥಗಿತಗೊಳಿಸಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕೋರ್ಟ್ ತಡೆಯಾಜ್ಞೆ ಇರುವ ಮಾರ್ಗವನ್ನು ಹೊರತುಪಡಿಸಿ ಬಾಕಿ ಮಾರ್ಗಗಳಿಗೆ ಬಸ್ ಸೌಲಭ್ಯ ಕಲ್ಪಿಸಬೇಕು. ನೆಪವೊಡ್ಡಿ ಸಾರ್ವಜನಿಕ ಸೇವೆ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ಸಭೆಯಲ್ಲಿಯೂ ಕೆಎಸ್‌ಆರ್‌ಟಿಸಿ ಸಮಸ್ಯೆ ಬಗ್ಗೆ ಚರ್ಚಿಸಲಾಗುತ್ತಿದ್ದು, ಕಾರಣಗಳನ್ನಷ್ಟೇ ನೀಡುತ್ತಾ ಬರಲಾಗುತ್ತಿದೆ. ಆದರೆ ಯಾವೊಂದು ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ವಿಳಂಬ ಧೋರಣೆ ಕೈಬಿಟ್ಟು ಬಸ್ ಸಂಚರಿಸಲು ಸೂಕ್ತ ವ್ಯವಸ್ಥೆ ಮಾಡಿ ಎಂದವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಂಚ ಗ್ಯಾರಂಟಿ ಯೋಜನೆಯಿಂದ ಬೈಂದೂರು ತಾಲೂಕಿಗೆ ಇದುವರೆಗೆ 222.91 ಕೋಟಿ ರೂ. ಅನುದಾನ ಬಂದಿದೆ ಎಂದು ತಿಳಿಸಿದರು.
ತಾಪಂ ಇಒ ರಾಜಕುಮಾರ್, ಸಮಿತಿ ಸದಸ್ಯರಾದ ಮಾಲತಿ ಶಿವಾನಂದ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ಸೂರ್ಯಕಾಂತಿ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ಮುಕ್ರಿ ಮೊಹಮ್ಮದ್ ಅಲ್ತಾಫ್, ಪ್ರಭಾಕರ ನಾಯ್ಕ, ಅಣ್ಣಪ್ಪ ಶೆಟ್ಟಿ, ಮೆಸ್ಕಾಂ, ಕೆಎಸ್‌ಆರ್‌ಟಿಸಿ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ ಹಾಗೂ ಯುವ ಸಬಲೀಕರಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.