

ವಿಜಯವಾಣಿ ಸುದ್ದಿಜಾಲ ಮೈಸೂರು
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ನಗರದಲ್ಲಿ ಪ್ರತ್ಯೇಕವಾಗಿ ಎರಡು ಪ್ರತಿಭಟನೆಗಳು ನಡೆದವು.
ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯೆಯರು ತಮ್ಮ ಬ್ಯಾಂಕ್ ಪಾಸ್‌ಬುಕ್‌ಗಳನ್ನು ಪ್ರದರ್ಶಿಸಿ ಪ್ರತಿಭಟಿಸಿದರು.
ಮನೆ ಮನೆಗೆ ಭೇಟಿ ನೀಡಿ ಜನರ ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳಿಗೆ ಸ್ಪಂದಿಸುವ ಆಶಾ ಕಾರ್ಯಕರ್ತೆಯರ ಸೇವೆಯನ್ನು ಗ್ರಾಮವೇ ಕೊಂಡಾಡುತ್ತಿದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ಜೀವವನ್ನು ಲೆಕ್ಕಿಸದೆ ಸೇವೆ ಮಾಡುತ್ತಿದ್ದೇವೆ. ಸರ್ಕಾರ ತಿಂಗಳಿಗೆ ಕೇವಲ ಒಂದು ಮಾಸ್ಕ್, ಒಂದು ಗ್ಲೌಸ್ ನೀಡಿದ್ದು, ರಕ್ಷಣಾ ಪರಿಕರ ನೀಡಿಲ್ಲ ಎಂದು ಆರೋಪಿಸಿದರು.
ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸದ ನಂತರ ಕರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ಕೆಲ ಭಾಗಗಳಲ್ಲಿ ವೈರಸ್ ಸಮುದಾಯಕ್ಕೂ ಹರಡಿದೆ. ಇಷ್ಟಾದರೂ ಸರ್ಕಾರ ಸಾರ್ವಜನಿಕರ ಸುರಕ್ಷಿತ ಬಗ್ಗೆ ಕಾಳಜಿ ತೋರದೆ ಸುಳ್ಳು ಮಾಹಿತಿಗಳನ್ನು ನೀಡುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸಿ ರಾಜ್ಯದ ಜನರ ಪ್ರಾಣ ಉಳಿಸಬೇಕು ಎಂದು ಆಗ್ರಹಿಸಿದರು.
ಮಾಸಿಕ 4 ಸಾವಿರ ರೂ. ಗೌರವಧನ ನೀಡಲಾಗುತ್ತಿದ್ದು, ಪ್ರೋತ್ಸಾಹಧನ ನೀಡುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಇಲಾಖೆ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಈ ಕೂಡಲೇ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಸಂಘದ ಶುಭಾ ಮಂಗಳಾ, ಸುನಿತಾ, ಸುನಿತಾ ಇತರರಿದ್ದರು.
ಎಐಡಿವೈಒ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡು ಎಐಡಿವೈಒ ಸಂಘಟನೆಯ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡಬೇಕು. ಅವರ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಸವರಾಜು, ಚಂದ್ರಕಲಾ ಸೇರಿ ಇತರರಿದ್ದರು.