

ಮಂಗಳೂರು : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ (21), ಬಂಟ್ವಾಳ ಅಮ್ಮುಂಜೆಯ ಶಿವಾಜಿನಗರದ ಪ್ರಥ್ವಿರಾಜ್ (21), ಚಿಂತನ್ (19) ಬಂಧಿಸಲ್ಪಟ್ಟವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲಿನ ಗಂಭೀರ ಗಲ್ಲೆಗೆ ಸಂಬಂಧಿಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 191 (1), 191 (2), 191 (3), 118(1), 118(2), 109, 103 ಜತೆಗೆ 190 ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಾಗಿದೆ.'
ಅಬ್ದುಲ್ ರಹಿಮಾನ್ ಅವರ ಕೊಲೆ ಪ್ರಕರಣದ ಆರೋಪಿಗಳ ಪತ್ತೆಗೆ ಸಂಬಂಧಿಸಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ 5 ತನಿಖಾ ತಂಡಗಳನ್ನು ರಚಿಸಲಾಗಿತ್ತು. ತನಿಖಾ ತಂಡವು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.