ಲೋಕಸಭೆ ಚುನಾವಣೆಗೆ ಮೂವರ ಹೆಸರು ಮುಂಚೂಣಿ

Shailendra Beldale
Published on

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ‌್ಸಲು ಹಲವಾರು ಜನರು ಆಕಾಂಕ್ಷಿಗಳಿದ್ದು, ಅವರಲ್ಲಿ ಮೂವರು ಹೆಸರು ಮುಂಚೂಣಿಯಲ್ಲಿದೆ ಎಂದು ಬೀದರ್ ಶಾಸಕ ಹಾಗೂ ರಾಯಚೂರು ಲೋಕಸಭೆ ಕ್ಷೇತ್ರದ ವೀಕ್ಷಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
ಸ್ಥಳೀಯ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ಟಿಕೆಟ್ ಆಕಾಂಕ್ಷಿಗಳು ಮತ್ತು ಕಾರ್ಯಕರ್ತರಿಂದ ಮಾಹಿತಿ ಮತ್ತು ಅಭಿಪ್ರಾಯ ಸಂಗ್ರಹಿಸಿ ರಾಜ್ಯಾಧ್ಯಕ್ಷರಿಗೆ ವರದಿ ಸಲ್ಲಿಸಲಾಗುತ್ತಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಕ್ಷೇತ್ರ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಿರುವುದರಿಂದ ಎರಡು ಜಿಲ್ಲೆಗಳ ಮುಖಂಡರು, ಕಾರ್ಯಕರ್ತರಿಂದ ಅಭಿಪ್ರಾಯ ಪಡೆಯಲಾಗುತ್ತಿದೆ. ಪಕ್ಷದಲ್ಲಿ ಯಾರಾದರೂ ಟಿಕೆಟ್ ಕೇಳಬಹುದಾಗಿದ್ದು, ಟಿಕೆಟ್ ನೀಡುವುದು ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ.
ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಕಾರ್ಯಕರ್ತರಿಗೆ ಮುಕ್ತವಾಗಿ ಮಾತನಾಡಲು ಅವಕಾಶ ನೀಡಲಾಗುತ್ತಿದ್ದು, ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢಿಕರಿಸಿ ರಾಜ್ಯಾಧ್ಯಕ್ಷರಿಗೆ ನೀಡಲಾಗುವುದು ಎಂದು ಡಾ.ಶೈಲೇಂದ್ರ ಬೆಲ್ದಾಳೆ ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕ ಎ.ಪಾಪಾರೆಡ್ಡಿ, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net