7ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ: ದಕ್ಷಿಣ ಕರ್ನಾಟಕದಲ್ಲಿ ಬಿರುಸು

Rain Alert
Published on

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಧಗೆ ಹೆಚ್ಚುತ್ತಿರುವ ಬೆನ್ನಲ್ಲೇ 7 ದಿನ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬೆಂಗಳೂರು ನಗರ, ಮೈಸೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಬುಧವಾರವೂ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗದಲ್ಲಿ ಮೇ 1ರಿಂದ ಮೇ 7ರವರೆಗೆ ಗುಡುಗು ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ.

ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್​, ಧಾರವಾಡ, ಗದಗ, ಬಾಗಲಕೋಟೆ ಮತ್ತು ಹಾವೇರಿಯಲ್ಲಿ ಮುಂದಿನ 48 ಗಂಟೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಕೆಲವೆಡೆ ಪ್ರತಿ ಗಂಟೆಗೆ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಉಷ್ಣಾಂಶ ಏರಿಳಿತ: ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಉಷ್ಣಾಂಶ ಏರಿಳಿತವಾಗುತ್ತಿದೆ. ಕಲಬುರಗಿಯಲ್ಲಿ ಬುಧವಾರ 41.2 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ರಾಯಚೂರು 38.6, ಬೀದರ್​ 38 ಡಿ.ಸೆ. ವರದಿಯಾಗಿದೆ. ರಾಜ್ಯದಲ್ಲಿ ಮುಂದಿನ 5 ದಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾಗಶ@ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಡಿ.ಸೆ. ಮತ್ತು 23 ಡಿ.ಸೆ. ಇರಲಿದೆ. ಕೆಲ ಸಂದರ್ಭದಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net