

ಬೆಳಗಾವಿ/ಬೋರಗಾಂವ : ನೆರೆಯ ಮಹಾರಾಷ್ಟ್ರ ದಿಂದ ಆಗಮಿಸುತ್ತಿರುವ ಜನರಲ್ಲಿಯೇ ಅತೀ ಹೆಚ್ಚಿನ ರೀತಿಯಲ್ಲಿ ಕರೊನಾ ಸೋಂಕು ಕಂಡು ಬರುತ್ತಿದ್ದು, ನಮ್ಮ ರಾಜ್ಯ ಪ್ರವೇಶಿಸುವವರಿಗೆ ಇ-ಪಾಸ್ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದ ಬಳಿ ಇರುವ ಅಂತಾರಾಜ್ಯ ಚೆಕ್‌ಪೋಸ್ಟ್‌ಗೆ ಶನಿವಾರ ಭೇಟಿ ನೀಡಿದ ಬಳಿಕ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಇ-ಪಾಸ್ ಸ್ಥಗಿತಗೊಳಿಸುವ ವಿಷಯದಲ್ಲಿ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ರಾಜ್ಯದಲ್ಲಿ ಕರೊನಾ ವೈರಸ್ ಹರಡುವುದನ್ನು ನಿಯಂತ್ರಿಸುವಲ್ಲಿ ವಿವಿಧ ಗಡಿ ಭಾಗದಲ್ಲಿರುವ ಎಲ್ಲ ಚೆಕ್‌ಪೋಸ್ಟ್‌ಗಳ ಪಾತ್ರ ಪ್ರಮುಖವಾಗಿದೆ. ಹಾಗಾಗಿ ಇ- ಪಾಸ್ ಇಲ್ಲದೇ ಬರುತ್ತಿರುವವರನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇ-ಪಾಸ್ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸೋಣ ಎಂದರು.
ಎಚ್ಚರಿಕೆಯಿಂದಿರಿ: ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲರನ್ನೂ ತಪಾಸಣೆ ನಡೆಸಿ, ಅಗತ್ಯವಿದ್ದರೆ ಕ್ವಾರಂಟೈನ್ ಮಾಡಬೇಕು. ಮಹಾರಾಷ್ಟ್ರದಿಂದ ಪ್ರತಿದಿನ ಆಗಮಿಸುವ ಜನರು ಹಾಗೂ ವಾಹನಗಳ ಸಂಖ್ಯೆಯ ಬಗ್ಗೆ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬೇಕು. ಪೊಲೀಸ್, ಆರೋಗ್ಯ ಇಲಾಖೆಯ ಕರೊನಾ ವಾರಿಯರ್ಸ್‌ಗಳಿಗೂ ಸೋಂಕು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಬಹಳ ಎಚ್ಚರಿಕೆಯಿಂದ ತಮ್ಮ ಕಾರ್ಯನಿರ್ವಹಿಸಬೇಕು ಎಂದು ಸಚಿವ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಎಸ್ಪಿ ಲಕ್ಷ್ಮಣ ನಿಂಬರಗಿ, ಬೆಳಗಾವಿ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ್ ಇತರರು ಇದ್ದರು.
ತುರ್ತು ಸಂದರ್ಭದಲ್ಲಿ ರಾಜ್ಯ ಪೊಲೀಸ್ ಇಲಾಖೆ ಅತ್ಯುತ್ತಮ ಕಾರ್ಯನಿರ್ವಹಿಸಿದೆ. ರಾಜ್ಯದಲ್ಲಿ ಎಲ್ಲ ತಬ್ಲಿಘಿಗಳು ಹಾಗೂ ಅವರ ಸಂಪರ್ಕಿತರನ್ನು ಗುರುತಿಸಿ, ಚಿಕಿತ್ಸೆ ಕೊಡಿಸುವ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಉತ್ತಮ ಕೆಲಸ ಆಗಿರುವುದರಿಂದ ಕೋವಿಡ್-19 ಸೋಂಕು ನಿಯಂತ್ರಣ ಸಾಧ್ಯವಾಗಿದೆ. ರಾಜ್ಯ ಪ್ರವೇಶಿಸುವ ಗೂಡ್ಸ್ ವಾಹನಗಳ ಚಾಲಕ ಮತ್ತು ಕ್ಲೀನರ್‌ಗಳ ಆರೋಗ್ಯವನ್ನೂ ಕೂಡ ಕಡ್ಡಾಯವಾಗಿ ತಪಾಸಣೆ ಮಾಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಕರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಶ್ರಮಿಸುತ್ತಿರುವ ಆರೋಗ್ಯ, ಪೊಲೀಸ್ ಸೇರಿ ವಿವಿಧ ಇಲಾಖೆ ಸಿಬ್ಬಂದಿ ಗಂಟಲು ದ್ರವ ಮಾದರಿಯನ್ನೂ ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಪಿಪಿಇ ಕಿಟ್ ಬಳಸಬೇಕು. ಚೆಕ್‌ಪೋಸ್ಟ್‌ನಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ, ಸಂಬಂಧಿತರಿಗೆ ಕ್ವಾರಂಟೈನ್ ಮುದ್ರೆ ಹಾಕಬೇಕು. ಸಿಬ್ಬಂದಿಯ ಕೆಲಸದ ಅವಧಿಯನ್ನು ಎಂಟು ಗಂಟೆಗಳಿಗೊಮ್ಮೆ ಶಿಫ್ಟ್ ಮಾಡಬೇಕು. | ಬಸವರಾಜ ಬೊಮ್ಮಾಯಿ ಗೃಹ ಸಚಿವ
ರಿಪೋರ್ಟಿಂಗ್ ಮಾದರಿಯನ್ನು ಆನ್‌ಲೈನ್ ಮಾಡಿದರೆ ಸಾಕಷ್ಟು ಸಮಯ ಉಳಿತಾಯವಾಗುತ್ತದೆ. ಅದೇ ರೀತಿ ಇ-ಪಾಸ್ ವಿತರಿಸಿದ ಬಳಿಕ ಅದರ ಬಗ್ಗೆ ಚೆಕ್‌ಪೋಸ್ಟ್‌ಗೆ ಮಾಹಿತಿ ನೀಡಿದರೆ ಪ್ರಯಾಣಿಕರ ತಪಾಸಣೆ ಸುಲಭವಾಗಲಿದೆ. | ಅಮರನಾಥರೆಡ್ಡಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ