

ಚಿಕ್ಕಬಳ್ಳಾಪುರ: ತಂಬಾಕು ಸೇವಿಸುವವರಿಂದ ಇತರರೂ ದುಷ್ಪ್ಪರಿಣಾಮ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಸಂಪೂರ್ಣ ಕಡಿವಾಣ ಹಾಕುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಇಂದಿರಾ ಆರ್.ಕಬಾಡೆ ಸೂಚಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಗೊಂಡಿರುವ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ -2003 ಕಾಯ್ದೆಯ ಅರಿವು ಮೂಡಿಸುವ ರಥಕ್ಕೆ ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಸಿರು ನಿಶಾನೆ ತೋರಿದರು.
ಈಗಾಗಲೇ ತಂಬಾಕು ವ್ಯಸನದಿಂದ ಮುಕ್ತಗೊಳಿಸಲು ಜಿಲ್ಲಾಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಜನರಿಗೆ ಉಚಿತ ಆಪ್ತಸಮಾಲೋಚನೆ ಹಾಗೂ ಚಿಕಿತ್ಸೆ ಸೌಲಭ್ಯ ಸಿಗುತ್ತಿದೆ ಎಂದು ತಿಳಿಸಿದರು. ಜಿಲ್ಲಾದ್ಯಂತ ಕೋಟ್ಪಾ ದಾಳಿಗಳನ್ನು ನಡೆಸಿ ಪ್ರಕರಣಗಳನ್ನು ದಾಖಲಿಸಿ, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತಿದೆ. ಸಾರ್ವಜನಿಕರಿಗೆ ತಂಬಾಕು ಸೇವನೆಯ ದುಷ್ಪ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು, ಪೂರ್ಣ ಪ್ರಮಾಣದ ಗುರಿ ಸಾಧಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್, ಎನ್‌ಟಿಸಿಪಿ ಕಾರ್ಯಕ್ರಮದ ಸಮಾಲೋಚಕ ರಾಘವೇಂದ್ರರೆಡ್ಡಿ ಮತ್ತಿತರರು ಇದ್ದರು.
10 ದಿನಗಳ ಜಾಗೃತಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ 10 ದಿನಗಳ ಕಾಲ ಧ್ವನಿವರ್ಧಕ ಹಾಗೂ ಮಾಹಿತಿ ಚಿತ್ರ ಸಹಿತ ವಾಹನದ ಮೂಲಕ ಪ್ರಚಾರ ನಡೆಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.