ತಂಬಾಕು ನಿಯಂತ್ರಣದಲ್ಲಿ ಜಿಲ್ಲೆ ಮಾದರಿಯಾಗಲಿ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

Tobacco Free Campaign Mandya
Published on

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಶ್ರೀರಂಗಪಟ್ಟಣ ದಸರಾವನ್ನು ತಂಬಾಕು ಮುಕ್ತ ಕಾರ್ಯಕ್ರಮವನ್ನಾಗಿಸಬೇಕು. ಈ ಮೂಲಕ ಮಂಡ್ಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ದೇಶಕ್ಕೆ ಮಾದರಿ ಎನ್ನುವಂತಾಗುವುದಕ್ಕೆ ಸಾರ್ವಜನಿಕರು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಂಬಾಕು ಮುಕ್ತ ಅಭಿಯಾನ ಹಾಗೂ ಸಹಿ ಸಂಗ್ರಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲಾದ್ಯಂತ ಯುವ ಜನರನ್ನು ತಂಬಾಕು ಮುಕ್ತರನ್ನಾಗಿಸಲು ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಅದರಂತೆ ಸೆ.24ರಿಂದ ನ.23ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಅಭಿಯಾನದ ಅವಧಿಯಲ್ಲಿ ಮಾರ್ಗಸೂಚಿಯಂತೆ ಪಂಚಾಯತ್ ರಾಜ್ ಇಲಾಖೆಯಿಂದ ಜಿಲ್ಲೆಯ ಕನಿಷ್ಟ 20 ಗ್ರಾಮವನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಮೂಲಕ ತಂಬಾಕು ಮುಕ್ತವನ್ನಾಗಿಸಬೇಕು. ಇದಕ್ಕೆ ಪೂರಕವಾಗಿ ಪೊಲೀಸ್ ಇಲಾಖೆಯಿಂದ ಎಲ್ಲ ಠಾಣೆಯಲ್ಲಿ ಪ್ರತಿವಾರ ಕನಿಷ್ಟ ಎರಡು ಬಾರಿ ಕೋಟ್ಪಾ ಕಾರ್ಯಾಚರಣೆ ನಡೆಸಿ ಸೆಕ್ಷನ್ 4, 5, 6ಎ, 6ಬಿ, 7, 8, 9 ಅಡಿ ಪ್ರಕರಣ ದಾಖಲಿಸಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಅಂತೆಯೇ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳನ್ನು ಶೇಕಡಾ ನೂರರಷ್ಟು ತಂಬಾಕು ಮುಕ್ತಗೊಳಿಸಬೇಕು. ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಮಕ್ಕಳಿಗೆ ತಂಬಾಕು ಉತ್ಪನ್ನಗಳಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆ ಅರಿವು ಮೂಡಿಸಬೇಕು. ವಿವಿಧ ಇಲಾಖೆಗಳು ಕಾರ್ಯಕ್ರಮ ಕೈಗೊಂಡು ವಿದ್ಯಾರ್ಥಿಗಳನ್ನು ಹಾಗೂ ಯುವ ಜನರನ್ನು ತಂಬಾಕು ಮುಕ್ತ ಜೀವನ ನಡೆಸಲು ಪ್ರೇರೇಪಿಸಬೇಕು. ನಗರಾಭಿವೃದ್ಧಿ ಇಲಾಖೆ ವತಿಯಿಂದ ತಂಬಾಕು ಮಾರಾಟ ಪರವಾನಗಿ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಿ ಆದಷ್ಟು ಬೇಗ ನೂತನ ನಿಯಮಾವಳಿಗಳನ್ನು ಜಾರಿಗೊಳಿಸಿ ತಂಬಾಕು ಮಾರಾಟ ಪರವಾನಗಿ ಆರಂಭಿಸಬೇಕು. ನಗರಾಭಿವೃದ್ಧಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಸವಿಲೇವಾರಿ ವಾಹನಗಳ ಮೂಲಕ ಪ್ರತಿನಿತ್ಯ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕುಮಾರ್, ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ವೈದ್ಯರ ಸಂಘದ ಅಧ್ಯಕ್ಷ ಡಾ.ಮರೀಗೌಡ, ಡಿಡಿಪಿಐ ಎಚ್.ಶಿವರಾಮೇಗೌಡ, ಜಿಲ್ಲಾ ಸಲಹೆಗಾರ ತಿಮ್ಮರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net