

ಶಿವಮೊಗ್ಗ: ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಸೆ.23ರಂದು ನಗರದ ವೀರಶೈವ ಕಲ್ಯಾಣ ಮಂದಿರದ ಹಿಂಭಾಗದಲ್ಲಿರುವ ಚೌಕಿಮಠದ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಶಿವರಾಜ್ ತಿಳಿಸಿದರು.
ಅಂದು ಬೆಳಗ್ಗೆ 7ಕ್ಕೆ ಕೇದಾರ ಪೀಠದ ಶ್ರೀ ಭೀಮಾಶಂಕರಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಇಷ್ಟಲಿಂಗ ಪೂಜೆ ನೆರವೇರಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಗಳೂರು ಕಣ್ವಕುಪ್ಪೆಯ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಿರೇಮಠದ ಶ್ರೀ ಕೇದಾರ ಲಿಂಗ ಶಿವಶಾಂತ ವೀರ ಶಿವಾಚಾರ್ಯ ಸ್ವಾಮೀಜಿ, ಮಳಲಿ ಮಠದ ಶ್ರೀ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಬಿಳಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀ ಚನ್ನವೀರ ದೇಶಿಕೇಂದ್ರ ಸ್ವಾಮೀಜಿ ಇಷ್ಟಲಿಂಗ ಪೂಜೆಯ ನೇತೃತ್ವ ವಹಿಸಲಿದ್ದಾರೆ ಎಂದರು.
ಇಷ್ಟಲಿಂಗ ಪೂಜೆ ಬಳಿಕ ಬೆಳಗ್ಗೆ 11ಕ್ಕೆ ಏರ್ಪಡಿಸಿರುವ ಧರ್ಮಸಭೆಯನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಚಿತ್ರನಟ ಡಾಲಿ ಧನಂಜಯ ಹಾಗೂ ನಟಿ ಅದಿತಿ ಪ್ರಭುದೇವ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವೈದ್ಯಕೀಯ ಘಟಕದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಧನಂಜಯ ಸರ್ಜಿ ತಿಳಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ್ರು, ಶಾಸಕರಾದ ಬಿ.ಕೆ.ಸಂಗಮೇಶ್, ಬಿ.ವೈ. ವಿಜಯೇಂದ್ರ, ಎಸ್.ಎನ್.ಚನ್ನಬಸಪ್ಪ, ಮಾಜಿ ಶಾಸಕರಾದ ಆಯನೂರು ಮಂಜುನಾಥ್, ಎಚ್. ಎಂ. ಚಂದ್ರಶೇಖರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ವೀರಶೈವ ಕಲ್ಯಾಣ ಮಂದಿರದ ಗೌರವ ಕಾರ್ಯದರ್ಶಿ ಎನ್.ಜೆ. ರಾಜಶೇಖರ್, ವೇದಿಕೆಯ ಶಿವಮೊಗ್ಗ ತಾಲೂಕು ಅಧ್ಯಕ್ಷ ಧನರಾಜ್, ಪ್ರಮುಖರಾದ ಎಸ್.ಎನ್. ಮಹಾಲಿಂಗಯ್ಯ ಶಾಸಿ, ಕೆ.ಬಿ.ಉಮೇಶ್, ಉಮೇಶ್ ಹಿರೇಮಠ್, ಅವಿನಾಶ್, ಪ್ರದೀಪ್ ಇತರರಿದ್ದರು.