ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಸಲಹಾ ಸಮಿತಿ ರಚನೆ

tourism department meeting
Published on

ಮೈಸೂರು: ಪ್ರವಾಸೋದ್ಯಮ ಅಭಿವೃದ್ಧಿ ಸಲಹಾ ಸಮಿತಿ ರಚಿಸಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಿ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಎಂ.ಕೆ. ಸವಿತಾ ಹೇಳಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇವಲ ದಸರಾ ಸಂದರ್ಭದಲ್ಲಿ ಮಾತ್ರವಲ್ಲದೆ ಉಳಿದ ದಿನಗಳಲ್ಲಿಯೂ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಬೇಕಾದ ಸಲಹೆ ಸೂಚನೆಗಳನ್ನು ಸಮಿತಿಯಿಂದ ಪಡೆಯಲಾಗುವುದು. ಸಮಿತಿಯಲ್ಲಿ ವ್ಯಕ್ತವಾಗುವ ಸಲಹೆಗಳನ್ನು ಸರ್ಕಾರದ ಗಮನಕ್ಕೆ ತರುವುದಕ್ಕೆ ಅಗತ್ಯ ಕ್ರಮ ವಹಿಸಲಾಗುವುದು. ಇದಕ್ಕೆ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಎಲ್ಲ ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಎಂದರು.

ಜಿಲ್ಲೆಯಲ್ಲಿರುವ ಹೋಟೆಲ್ ರೆಸಾರ್ಟ್ ಮತ್ತು ಹೋಂ ಸ್ಟೇಗಳಿಗೆ ಭೇಟಿ ನೀಡುವ ಪ್ರವಾಸಿಗರಲ್ಲಿ ಸ್ವಚ್ಛತೆ, ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ನೈರ್ಮಲ್ಯ, ಶುಚಿತ್ವದ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಇನ್ನಿತರೆ ಪರಿಸರಸ್ನೇಹಿ ಚಟುವಟಿಕೆಗಳನ್ನು ಪ್ರಸ್ತುತಿ ಪಡಿಸಲು ಎಲ್ಲ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸಾಮಾನ್ಯ ಅಡ್ವೈಸರಿಗಳನ್ನು ಪಾಲಿಸುವಂತೆ ಸೂಚಿಸಿದರು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಮೈಸೂರಿಗೆ ಬರುವ ಪ್ರವಾಸಿಗರು ಅಕ್ಕ ಪಕ್ಕದಲ್ಲಿರುವ ಊಟಿ, ಮಡಿಕೇರಿಗಳಿಗೆ ವಾಸ್ತವ್ಯಕ್ಕಾಗಿ ತೆರಳುತ್ತಿದ್ದು, ಈ ನಿಟ್ಟಿನಲ್ಲಿ ಮೈಸೂರಿನಲ್ಲೇ ವಾಸ್ತವ್ಯ ಹೂಡುವಂತೆ ಮಾಡಲು ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಹಾಗೂ ಹೆಚ್ಚು ಚಟುವಟಿಕೆಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ ಎಂದರು.

ದಸರಾ ಸಂದರ್ಭದಲ್ಲಿ ರಾತ್ರಿ 12 ಗಂಟೆಯವರೆಗೂ ದೀಪಾಲಂಕಾರ ವೀಕ್ಷಿಸಲು ಅವಕಾಶ ಹಾಗೂ ದೀಪಾಲಂಕಾರ ವೀಕ್ಷಿಸಿದ ನಂತರ ತೆರಳುವ ಪ್ರವಾಸಿಗರಿಗೆ ಮಧ್ಯರಾತ್ರಿಯವರೆಗೂ ಊಟದ ವ್ಯವಸ್ಥೆ ಮಾಡಲು ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ಅವಕಾಶ ಒದಗಿಸಬೇಕು ಎಂದು ಹೇಳಿದರು.

ಶಕ್ತಿ ಯೋಜನೆಯಿಂದ ಶೇ.30ರಷ್ಟು ಹೆಚ್ಚು ಮಹಿಳೆಯರು ದಸರಾ ವೀಕ್ಷಿಸಲು ಆಗಮಿಸುವ ಹಿನ್ನೆಲೆ ವಸತಿ ಸೌಲಭ್ಯ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಬೇಕು. ದಸರಾ ಮುಗಿದ ನಂತರವೂ ಮುಂದಿನ ಎರಡು ವಾರಗಳವರೆಗೆ ದಸರಾ ದೀಪಾಲಂಕಾರ ವೀಕ್ಷಣೆಗೆ ಅವಕಾಶ ಕಲ್ಪಿಸಬೇಕು. ಅರಮನೆ ಸುತ್ತ ಸಂಚರಿಸುವ ಟಾಂಗಾದವರು ಪ್ರವಾಸಿಗರಿಂದ ಹೆಚ್ಚು ಹಣ ವಸೂಲಿ ಮಾಡುತ್ತಿದ್ದು, ಕಿಲೋಮೀಟರ್‌ಗೆ ಇಂತಿಷ್ಟು ದರವನ್ನು ಇಲಾಖೆಯಿಂದ ನಿಗದಿಪಡಿಸಬೇಕು ಎಂದು ಹೇಳಿದರು.

ವಿಶ್ವ ಪಾರಂಪರಿಕ ತಾಣವಾಗಿ ತಿ.ನರಸೀಪುರ ತಾಲೂಕಿನ ಸೋಮನಾಥಪುರ ದೇವಾಲಯ ಸೇರ್ಪಡೆಯಾಗಿದೆ. ಪ್ರವಾಸಿಗರು ಸೆಳೆಯುವ ನಿಟ್ಟಿನಲ್ಲಿ ಅಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು. ಹೆಚ್ಚು ಪ್ರವಾಸಿಗರು ಸೋಮನಾಥಪುರ ದೇವಾಲಯಕ್ಕೆ ಭೇಟಿ ನೀಡಲು ಪ್ರಚಾರ ನೀಡಲು ಕ್ರಮ ವಹಿಸಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್, ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ಜೆ.ಪಿ ಅರಸ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net