ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್: ಸರ್ಕಾರಕ್ಕೆ ಗಣಿಗಾರಿಕೆ ಮುಖ್ಯವಲ್ಲವೆಂದ ಸಚಿವ ಎನ್.ಚಲುವರಾಯಸ್ವಾಮಿ

Trail Blast Meeting Mandya
Published on

ಮಂಡ್ಯ: ರೈತ ಸಂಘಟನೆಗಳ ತೀವ್ರ ವಿರೋಧದ ಬೆನ್ನಲ್ಲೇ ಕೆಆರ್‌ಎಸ್ ಅಣೆಕಟ್ಟೆ ವ್ಯಾಪ್ತಿಯಲ್ಲಿ ನಡೆಸಬೇಕೆಂದಿದ್ದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ರೈತ ಸಂಘಟನೆ ಮುಖಂಡರೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಟ್ರಯಲ್ ಬ್ಲಾಸ್ಟ್ ಕುರಿತು ಸುದೀರ್ಘ ಚರ್ಚೆ ನಡೆಯಿತು. ಅದರಂತೆ ಬ್ಲಾಸ್ಟ್‌ನಿಂದಾಗುವ ಸಮಸ್ಯೆ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಗಣಿಗಾರಿಕೆಯಿಂದ ಬರುವ ರಾಜಧನದಿಂದ ಸರ್ಕಾರ ನಡೆಸುವ ಪ್ರಮೇಯ ಬಂದಿಲ್ಲ. ನಮಗೂ ಕೆ.ಆರ್.ಎಸ್ ಅಣೆಕಟ್ಟೆಯ ಸುರಕ್ಷತೆಯೇ ಬಹಳ ಮುಖ್ಯ. ಟ್ರಯಲ್ ಬ್ಲಾಸ್ಟ್ ಸಂಬಂಧ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಜು.15ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರೈತ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು. ನ್ಯಾಯಾಲಯದ ಆದೇಶ ಬಂದ ನಂತರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ತೆಗೆದುಕೊಳ್ಳೋಣ. ಅಲ್ಲಿಯವರೆಗೂ ಟ್ರಯಲ್ ಬ್ಲಾಸ್ಟ್ ಮಾಡುವುದಿಲ್ಲ. ಯಾರೂ ಸಹ ಗೊಂದಲ ಮಾಡಿಕೊಳ್ಳಬೇಡಿ, ನಮಗೆ ಗಣಿಗಾರಿಕೆ ಮುಖ್ಯವಲ್ಲ, ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿರುವ ಅಣೆಕಟ್ಟೆ ಸುರಕ್ಷತೆ ಮುಖ್ಯ. ಡ್ಯಾಂಗೆ ಸಣ್ಣ ತೊಂದರೆ ಆಗಲೂ ಬಿಡುವುದಿಲ್ಲ ಎಂದು ಭರವಸೆ ನೀಡಿದರು.

ಸಭೆಯಲ್ಲಿ ಶಾಸಕರಾದ ರವಿಕುಮಾರ್ ಗಣಿಗ, ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಎಎಸ್ಪಿ ತಿಮ್ಮಯ್ಯ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ಮಹೇಶ್, ಕಾವೇರಿ ನೀರಾವರಿ ನಿಗಮದ ತಾಂತ್ರಿಕ ಸಲಹೆಗಾರ ಶಿವಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ರೇಷ್ಮಾ, ನಾಗಮಧು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net