ಶಾಲಾ ಶಿಕ್ಷಕರಿಗೆ ಮಕ್ಕಳ ರಕ್ಷಣೆ ಬಗ್ಗೆ ತರಬೇತಿ ನೀಡಿ ; ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಜಿ.ಯರಗಟ್ಟಿ ತಾಕೀತು

04Tmk_Child_Rights (1)
Published on

ತುಮಕೂರು: ಬಾಲ್ಯವಿವಾಹ, ಬಾಲ ಕಾರ್ಮಿಕರಿಂದ ಮಕ್ಕಳನ್ನು ರಕ್ಷಿಸುವಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಜಿ.ಯರಗಟ್ಟಿ ತಾಕೀತು ಮಾಡಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜಾಗೃತಿ ಮೂಡಿಸಿ. ಅಲ್ಲದೇ ಮಕ್ಕಳ ಮಾಸಾಚರಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

ಜ.1 ರಿಂದ 6 ರಿಂದ 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಾರ್ಯಕ್ರಮ ಆರಂಭವಾಗಿದ್ದು, ಶಾಲಾ ಶಿಕ್ಷಕರಿಗೆ ಮಕ್ಕಳ ರಕ್ಷಣೆ ಬಗ್ಗೆ ತರಬೇತಿ ನೀಡಬೇಕು. ಕರೊನಾ ಸಮಯದಲ್ಲಿ ಗ್ರಾಮಾಂತರ ಪ್ರದೇಶದ ಭಾಗದಲ್ಲಿ ಹೆಚ್ಚು ಬಾಲ್ಯ ವಿವಾಹವಾಗಿರುವ ಬಗ್ಗೆ ಸಾಕಷ್ಟು ಸುದ್ದಿಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಆಯಾ ತಾಲೂಕು ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ಮಕ್ಕಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ 118 ಎಚ್‌ಐವಿ ಸೋಂಕಿತ ಮಕ್ಕಳಿದ್ದು, ಪ್ರತೀ ತಿಂಗಳು 1 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ಮಕ್ಕಳ ತಂದೆ ಅಥವಾ ತಾಯಿ ಇಲ್ಲದಿದ್ದರೆ ಅಂತಹ ಮಕ್ಕಳಿಗೆ ಶಿಕ್ಷಣ ಸೌಲಭ್ಯ ನೀಡಲಾಗುತ್ತದೆ. ದಾನಿಗಳಿಂದ ಶಿಕ್ಷಣಕ್ಕಾಗಿ 5 ಮಕ್ಕಳ ಖಾತೆಗೆ ನೇರವಾಗಿ ಹಣ ಜಮೆ ಮಾಡಲು ಕ್ರಮವಹಿಸಲಾಗಿದೆ ಎಂದರು.

ತಹಸೀಲ್ದಾರ್ ಮೋಹನ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ಕರೊನಾ ಸಮಯದಲ್ಲಿ ಹಾಸ್ಟೆಲ್‌ನಿಂದ ಮೂಲ ಸ್ಥಾನಕ್ಕೆ ಹಿಂದಿರುಗಿರುವ ಮಕ್ಕಳು ಏನು ಮಾಡುತ್ತಿದ್ದಾರೆ? ಆನ್‌ಲೈನ್ ಪಾಠ ಪಡೆದಿದ್ದಾರಾ, ವಿದ್ಯಾಗಮ ಕಾರ್ಯಕ್ರಮ ಪಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಅಪ್ರಾಪ್ತ ಮಕ್ಕಳು ದೌರ್ಜನ್ಯಕ್ಕೆ ಒಳಗಾಗದಂತೆ ಅರಿವು ಮೂಡಿಸಿ, ಕೇವಲ ಮಕ್ಕಳಿಗೆ ಮಾತ್ರವಲ್ಲದೇ ಆಯಾ ಶಾಲೆಯ ಮುಖ್ಯೋಪಾಧ್ಯಯರುಗಳು ಸಹ ಮಕ್ಕಳ ರಕ್ಷಣಾಧಿಕಾರಿಯಾಗಬೇಕು. ಕರೊನಾ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಬಾಲ್ಯವಿವಾಹಗಳು ಜಾಸ್ತಿಯಾಗುತ್ತಿದ್ದು, ಪಾಲಕರು ಹಾಗೂ ಮಕ್ಕಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಅವಶ್ಯಕತೆ ಇದೆ. ಹಾಗಾಗಿ, ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬಂತೆ ಕಾರ್ಯನಿರ್ವಹಿಸಬೇಕು ಎಂದು ಅಶೋಕ ಜಿ.ಯರಗಟ್ಟಿ ನಿರ್ದೇಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net