ಮಕ್ಕಳು ರಾಷ್ಟ್ರದ ಆಸ್ತಿ, ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

dc
trining meeting
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಮಕ್ಕಳು ದೇಶದ ಆಸ್ತಿ, ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಹೇಳಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಮಕ್ಕಳ ಹಕ್ಕುಗಳು ಮತ್ತು ಕಾನೂನು ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವುದರಿಂದ ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡುತ್ತಾರೆ. ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳು ಬರುತ್ತದೆ, ಕಾನೂನುಗಳು ತಿದ್ದುಪಡಿ ಆಗುತ್ತದೆ. ಆ ಕಾನೂನುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತದೆ ಎಂದು ಹೇಳಿದರು.
ಬಾಲ್ಯವಿವಾಹ ಅಪರಾಧ: ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಧ್ಯಕ್ಷರು 18 ವರ್ಷದೊಳಗಿನ ಹೆಣ್ಣು ಮಕ್ಕಳು, 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹವಾದರೆ ಅದು ಬಾಲ್ಯ ವಿವಾಹವಾಗುತ್ತದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಕಾನೂನಿನ ಮೂಲಕ ಶಿಕ್ಷೆ ವಿಧಿಸಲು ಅವಕಾಶವಿದೆ. ಬಾಲ್ಯ ವಿವಾಹ ಆಗುವುದರಿಂದ ದೈಹಿಕವಾಗಿ, ಮಾನಸಿಕವಾಗಿ, ಕೌಟುಂಬಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದರು. ಬಡತನ, ಮೂಢನಂಬಿಕೆ ಮುಂತಾದ ಕಾರಣಗಳಿಂದ ಬಾಲ್ಯ ವಿವಾಹ ಮಾಡುತ್ತಾರೆ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ತಡೆಯಲು ಶಿಕ್ಷಣ ಪ್ರಮುಖ ಅಸ್ತ್ರ, ಶಿಕ್ಷಣದ ಅರಿವು, ಜ್ಞಾನ ಬೆಳೆಸುತ್ತದೆ. ಶಿಕ್ಷಕರು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪರಿಶೀಲಿಸಿ ಹಾಗೂ ಪಾಲಕರ ಸಭೆಯನ್ನು ಕಾಲಕಾಲಕ್ಕೆ ನಡೆಸಿ ಮಕ್ಕಳ ಚಲನವಲನ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು. ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯಗಳು ಕಂಡುಬಂದಲ್ಲಿ ದೂರವಾಣಿ ಸಂಖ್ಯೆ 112 ಅಥವಾ ಚೈಲ್ಡ್ ಲೈನ್1098 ಗೆ ಉಚಿತ ದೂರವಾಣಿ ಕರೆ ಮಾಡಿ ದೂರು ನೀಡಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂರವಾಣಿ ಸಂಖ್ಯೆಗೆ 080-29560034 ಗೆ ಕರೆ ಮಾಡಿ ದೂರು ನೀಡಬಹುದು ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net