

ಮೈಸೂರು: 2021-22ನೇ ಸಾಲಿನ ಅಂತರ ವಿಶ್ವವಿದ್ಯಾಲಯ ಕ್ರೀಡಾ ಸ್ಪರ್ಧೆಗಳು, ಎರಡನೇ ಖೇಲೋ ಇಂಡಿಯಾ ಅಂತರ ವಿಶ್ವವಿದ್ಯಾಲಯ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ಪಡೆದ ಕ್ರೀಡಾಪಟುಗಳಿಗೆ ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.
ನಗರದ ಸ್ಪೋಟ್ಸ್ ಪೆವಿಲಿಯನ್ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂತರ ವಿವಿ ವಿವಿಧ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ, ಕಂಚು ಪದಕಪಡೆದ ಮೈಸೂರು ವಿವಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮಾತನಾಡಿ, ಈ ವರ್ಷ ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಪಾರ ಸಾಧನೆ ಮಾಡಿದ್ದಾರೆ. ಈ ಬಾರಿ ವಿವಿಧ ಕ್ರೀಡಾಕೂಟಗಳಲ್ಲಿ ಹೆಚ್ಚು ಪದಕಗಳನ್ನು ಗೆದ್ದು ವಿವಿಗೆ ಗೌರವ ತಂದಿದ್ದಾರೆ. ವಿದ್ಯಾರ್ಥಿಗಳು ಈ ಸಾಧನೆಯನ್ನು ಹೀಗೆ ಮುಂದುವರೆಸಬೇಕು ಎಂದರು.
ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆಯಲ್ಲೂ ಭಾಗಿಯಾಗಬೇಕು. ಕ್ರೀಡಾಪಟುಗಳಿಗೆ ಹಾಗೂ ಕ್ರೀಡೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು.
ಹಣಕಾಸು ಅಧಿಕಾರಿ ಡಾ.ಸಂಗೀತ ಗಜಾನನ ಭಟ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ, ಸಿಂಡಿಕೇಟ್ ಸದಸ್ಯೆ ಸಹನ ಶಿವಪ್ಪ, ಡಾ.ಎಚ್.ಎಸ್.ಕೃಷ್ಣಕುಮಾರ್ ಇತರರಿದ್ದರು.