

ಬೆಂಗಳೂರು: ಕಾರು-ಲಾರಿಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹೊನಗಾ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಮಹಾರಾಷ್ಟ್ರ ಮೂಲದ ಪಾಂಡುರಂಗ ಜಾಧವ್(76), ಹುಕ್ಕೇರಿ ಮೂಲದ ಕಾರು ಚಾಲಕ ಪಂಚಾಕ್ಷರಿ ಹಿರೇಮಠ ಎಂದು ಗುರುತಿಸಲಾಗಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಸ್ವಾ,ಮೀಜಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ಆಡಳಿತದ ಅವಧಿಯಲ್ಲಿ ಜಾರಿಗೆ ತಂದಿದ್ದ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ ರದ್ಧತಿ ಖಂಡಿಸಿ ಶನಿವಾರ ಬೆಳಗಾವಿಯಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಹೋರಾಟದಲ್ಲಿ ಭಾಗಿಯಾಗಲು ತೆರಳುತ್ತಿದ್ದ, ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ವೇಗವಾಗಿ ಚಲಿಸುತ್ತಿತ್ತು. ಬೆಳಗಾವಿ ತಾಲ್ಲೂಕಿನ ಹೊನಗಾ ಸಮೀಪ ಆಗಮಿಸಿದಾಗ ಕಾರಿನ ಮುಂಬದಿ ಇದ್ದ ಲಾರಿ ಚಾಲಕ ಬ್ರೇಕ್ ಹಾಕಿ ಗಾಡಿಯ ವೇಗವನ್ನು ಕಡಿಮೆ ಮಾಡಿದ್ಧಾನೆ. ಈ ವೇಳೆ ಹಿಂಬದಿ ವೇಗವಾಗಿ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳ ನಡುವೆ ಸಿಲುಕಿ ಕಾರ್ ಜಖಂಗೊಂಡಿದೆ.
ಮುಬದಿ ಕುಳಿತಿದ್ದ ಕಾರು ಚಾಲಕ ಪಂಚಾಕ್ಷರಿ ಹಾಗೂ ಪಾಂಡುರಂಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಸ್ವಾಮೀಜಿಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.