

ಮಂಗಳೂರು: ನಗರದ ಉರ್ವ ಸ್ಟೋರ್ ಬಳಿಯಿರುವ ತುಳುಭವನದ ಬಾಕಿ ಉಳಿದ ಕಾಮಗಾರಿಗಳಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದಿಂದ 3.60 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಅಪೂರ್ಣ ಕಾಮಗಾರಿಗಳಿಗೆ ವೇಗ ನೀಡಿ ಶೀಘ್ರ ಪೂರ್ಣಗೊಳಿಸುವಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿಯ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ನಗರದ ತುಳು ಭವನಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಅವರು, ತುಳು ಭವನದಲ್ಲಿ ಭವ್ಯ ಸಭಾಂಗಣ, ವಸ್ತು ಪ್ರದರ್ಶನಾಲಯ, ವೇದಿಕೆ, ವಿದ್ಯುದ್ದೀಕರಣ, ಫಾಲ್ ಸೀಲಿಂಗ್ ಸೇರಿದಂತೆ ಬಾಕಿ ಉಳಿದ ಕಾಮಗಾರಿಗಳನ್ನು ಕೈಗೊಳ್ಳಬೇಕು. ನವೆಂಬರ್‌ನೊಳಗೆ ಅವುಗಳನ್ನು ಪೂರ್ಣಗೊಳಿಸಬೇಕು ಎಂದರು.
*ಕೊಂಕಣಿ ಭವನ ನಿರ್ಮಾಣ ವೀಕ್ಷಣೆ:
ಕೊಂಕಣಿ ಅಕಾಡೆಮಿ ಭವನದ ಕಾಮಗಾರಿ ವೀಕ್ಷಿಸಿದ ಅವರು ಭವನ ನಿರ್ಮಾಣಕ್ಕೆ ಸರ್ಕಾರದಿಂದ 3 ಕೋಟಿ ರೂ. ಬಿಡುಗಡೆಯಾಗಿದೆ, ಅಡಿಪಾಯದ ಕಾಮಗಾರಿ ಮುಕ್ತಾಯವಾಗಿದ್ದು, ನೆಲಹಾಸನ್ನು ಸಮತಟ್ಟು ಮಾಡಲಾಗುತ್ತಿದೆ. ಭವನ ನಿರ್ಮಾಣದ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.
ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಗದೀಶ್ ಪೈ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರತ್ನಾಕರ್, ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಮೊದಲಾದವರಿದ್ದರು ನಂತರ ಅಧ್ಯಕ್ಷರು ಅಕಾಡೆಮಿಯಲ್ಲಿ ಪ್ರದರ್ಶನಗೊಳ್ಳುತ್ತಿದ್ದ ಯಕ್ಷಗಾನ ವೀಕ್ಷಿಸಿದರು.