

ತುಮಕೂರು: ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿರುವ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಕಾರ 2022 ಜುಲೈ 1 ರಿಂದ ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ.
ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳು ಬರುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳನ್ವಯ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿ, ಅಂಗಡಿ ಮಾಲೀಕರು, ಇ-ಕಾಮರ್ಸ್ ಕಂಪನಿ, ಬೀದಿ ವ್ಯಾಪಾರಿ, ವಾಣಿಜ್ಯ ಸಂಸ್ಥೆ(ಮಾಲ್, ಮಾರುಕಟ್ಟೆ ಸ್ಥಳ, ಶಾಪಿಂಗ್ ಕೇಂದ್ರ) ಸಿನಿಮಾ ಮನೆ, ಪ್ರವಾಸೋದ್ಯಮ ಸ್ಥಳ, ಶಾಲೆ, ಕಾಲೇಜು, ಕಚೇರಿ ಸಂಕೀರ್ಣ, ಆಸ್ಪತ್ರೆ, ಇತರೆ ಸಂಸ್ಥೆಗಳು ಹಾಗೂ ಸಾರ್ವಜನಿಕರು ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ, ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ.