

ತುಮಕೂರು: ಜಿಲ್ಲೆಯಲ್ಲಿರುವ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸಕಾಲದಲ್ಲಿ ಕಚೇರಿಗಳಿಗೆ ಆಗಮಿಸುತ್ತಿಲ್ಲ, ಕಚೇರಿ ಸಮಯದಲ್ಲಿ ಖುರ್ಚಿಯಲ್ಲಿ ಕುಳಿತಿರುವುದಿಲ್ಲ ಎಂಬ ದೂರುಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಂಬಂಧಪಟ್ಟರಿಗೆ ಸೂಚನೆಗಳನ್ನು ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಚೇರಿ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಸಕಾಲಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ ವಹಿಸಿದ ಕೆಲಸ-ಕಾರ್ಯಗಳನ್ನು ನಿಗದಿತ ಅವದಿಯೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಅಧಿಕಾರಿ, ನೌಕರರು ಪ್ರತಿ ದಿನ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು. ಕಚೇರಿ ವೇಳೆಯಲ್ಲಿ ಕರ್ತವ್ಯದ ಸ್ಥಳದಲ್ಲಿ ಹಾಜರಿರಬೇಕು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳಬಾರದು. ಸ್ವೀಕೃತ ಕಡತಗಳನ್ನು ಇ&-ಆಫೀಸ್ ಮೂಲಕವೇ ಮುಂದಿನ ಹಂತಕ್ಕೆ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿರುವ ಇತರೆ ಇಲಾಖೆ ಕಚೇರಿಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಸಿಬ್ಬಂದಿಗಳ ಸಮಯ ಪಾಲನೆ, ಕಾರ್ಯಕ್ಷಮತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಇದ್ದರು.