24ರಂದು ಕೆ-ಸೆಟ್​ ಪರೀಕ್ಷೆ

Exam
Published on

ತುಮಕೂರು: ನಗರ ವ್ಯಾಪ್ತಿಯ 9 ಪರೀಕ್ಷಾ ಕೇಂದ್ರಗಳಲ್ಲಿ ನ. 24ರಂದು ಕೆ-ಸೆಟ್​ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್​ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭಕಲ್ಯಾಣ್​ ಆದೇಶಿಸಿದ್ದಾರೆ.

ನಿಷೇಧಾಜ್ಞೆ ನವೆಂಬರ್​ 24ರ ಬೆಳಗ್ಗೆ 9 ರಿಂದ ಸಂಜೆ 3ರ ವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್​ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ರ್ನಿಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್​ ಇಲಾಖೆಗೆ ಆದೇಶಿಸಲಾಗಿದೆ.

ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್​ಆಪ್​ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಕ್ಯಾಮರಾ ಇಲ್ಲದಿರುವ ಸಾಮಾನ್ಯ ಮೊಬೈಲ್​ ಇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್​ ತರುವುದು, ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್​ 107 ಮತ್ತು 110ರ ಅಡಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net