ಎಸ್​ಸಿ, ಎಸ್​ಟಿ ಸಮಸ್ಯೆಗಳ ಅಹವಾಲು

Social welfare department
Published on

ತುಮಕೂರು: ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅ.19ರಂದು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್​ಸಿಪಿ, ಟಿಎಸ್​ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅ.18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಸಮಿತಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್​, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

19ರಂದು ಮಧ್ಯಾಹ್ನ 2.30ಕ್ಕೆ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದ್ದು, ಸಮಿತಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ,ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಅಹವಾಲುಗಳನ್ನು ಸಲ್ಲಿಸಲಿಚ್ಛಿಸುವವರು 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜೆಡಿಗೆ ನೇರವಾಗಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.

ಸ್ವೀಕೃತ ಅಹವಾಲುಗಳನ್ನು ಪ್ರಗತಿ ಪರಿಶೀಲನಾ ಸಭೆಯ ದಿನದಂದು ಸಮಿತಿಯ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರಲ್ಲದೆ, ಕಳೆದ ನಾಲ್ಕು ವರ್ಷದ ಸಮರ್ಪಕ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಿರಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್​. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ಗೌರವ್​ ಕುಮಾರ್​ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net