

ತುಮಕೂರು: ಇತಿಹಾಸ ಪ್ರಸಿದ್ಧ ಸಿದ್ಧಗಂಗೆ ಶ್ರೀಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ವಿಶೇಷವಾದ ಮಹಾರಥೋತ್ಸವ ಶನಿವಾರ ವಿಜೃಂಭಣೆಯಿಂದ ನೆರವೇರಿತು.
ಶ್ರೀಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ಬೆಳಗ್ಗೆ 11.50ಕ್ಕೆ ಸರಿಯಾಗಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ಕಿರಿಯ ಸ್ವಾಮೀಜಿ ಶ್ರೀಶಿವಸಿದ್ದೇಶ್ವರ ಸ್ವಾಮೀಜಿ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ ವಿವಿಧ ಮಠಾಧೀಶರು, ಅನೇಕ ಗಣ್ಯರು, ಭಕ್ತಾದಿಗಳು ಪಾಲ್ಗೊಂಡು ರಥವನ್ನು ಮುಂದಕ್ಕೆ ಎಳೆದು ಭಕ್ತಿ ಸಮರ್ಪಿಸಿದರು.
ರಥಕ್ಕೆ ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಃ, ಕಳಸಗಳ ಆರಾಧನೆ, ರಥಾಂಗ ಪೂಜೆ ಸೇರಿದಂತೆ ವಿವಿಧ ಪೂಜೆ ಸಲ್ಲಿಸಿ ಶ್ರೀಕ್ಷೇತ್ರದ ಆರಾಧ್ಯ ದೈವ ಸಿದ್ದಲಿಂಗೇಶ್ವರಸ್ವಾಮಿಯನ್ನು ರಥಕ್ಕೆ ಕೂರಿಸಿ ರಾಜೋಪಚಾರ ಮತ್ತು ಅಷ್ಟೋತ್ತರ ಪೂಜೆ ನೆರವೇರಿಸಲಾಯಿತು.
ರಥದ ಮುಂಭಾಗದಲ್ಲಿ ಜಯಾದಿ ಹೋಮ, ಗಣ ಹೋಮ, ಮೃತ್ಯುಂಜಯ ಹೋಮ ಸಹ ಮಾಡಲಾಯಿತು. ರಥವನ್ನು ಅಭೂತಪೂರ್ಣ ವಸ್ತçಗಳಿಂದ ಸುವರ್ಣ ಕಲಶಗಳಿಂದ ಧಾರ್ಮಿಕ ಲಾಂಛನಗಳಾದ ಮಕರ, ತೋರಣ, ಕಲಶ, ಕನ್ನಡಿ ವಿವಿಧ ಬಗೆಯ ಪುಷ್ಪ ಮಾಲೆಗಳಿಂದ ಅಲಂಕರಿಸಲಾಗಿತ್ತು.
ರಥ ಸಾಗಿದ ದಾರಿಯುದ್ದಕ್ಕೂ ನಂದಿಧ್ವಜ, ಕರಡಿ ಮಜಲು, ನಾಗಸ್ವರ, ವೀರಗಾಸೆ, ಪಟಕುಣಿತ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೆರೆದಿದ್ದ ಭಕ್ತ ಸಮೂಹವನ್ನು ಆಕರ್ಷಿಸಿದವು.
ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸುಡು ಬಿಸಿಲನ್ನೂ ಲೆಕ್ಕಿಸದೆ ರಥೋತ್ಸವದಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಬಾಳೆಹಣ್ಣು, ಹೂವು, ದವನ ಎಸೆದು ಭಕ್ತಿ ಸಮರ್ಪಿಸಿದರು.
ಶಿವರಾತ್ರಿ ಪ್ರಯುಕ್ತ ಜಾಗರಣೆಗಾಗಿ ನಾಡಿನಾದ್ಯಂತ ಸಹಸ್ರಾರು ಭಕ್ತಾದಿಗಳು ರಾತ್ರಿಯೇ ಶ್ರೀಮಠಕ್ಕೆ ಆಗಮಿಸಿದ್ದು ಇಂದು ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಸುಡುವ ಬಿಸಿಲನ್ನೂ ಲೆಕ್ಕಿಸದೆ ಭಕ್ತಾದಿಗಳು ಮಠದ ಶಾಲಾ ಕಟ್ಟಡಗಳ ಮೇಲೆ ಹತ್ತಿ ರಥೋತ್ಸವವನ್ನು ವೀಕ್ಷಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.