

ತುಮಕೂರು: ಜಿಲ್ಲೆಯಾದ್ಯಂತ 212 ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಪೂರ್ಣಗೊಳಿಸಿ ಇಲಾಖಾ ವಶಕ್ಕೆ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮನರೇಗಾ ಹಾಗೂ ಇಲಾಖಾ ಅನುದಾನದ ಅಡಿ 130 ಕಟ್ಟಡ, ಪಂಚಾಯತ್ ರಾಜ್‌ಯಡಿಯಲ್ಲಿ 56 ಹಾಗೂ ನಿರ್ಮಿತಿ ಕೇಂದ್ರದ ವತಿಯಿಂದ 26 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಈ ಕಾಮಗಾರಿ ಪ್ರಗತಿಯಲ್ಲಿವೆ. ಆದಷ್ಟು ಬೇಗ ಕಟ್ಟಡಗಳನ್ನು ಪೂರ್ಣಗೊಳುಸವಂತೆ ಸೂಚಿಸಿದರು.
ಪೌಷ್ಟಿಕ ಕೈತೋಟ: ಕಾಪೌಂಡ್ ಹೊಂದಿರುವ ಅಂಗನವಾಡಿ ಕೇಂದ್ರಗಳಲ್ಲಿ ಕೈತೋಟ ನಿರ್ಮಿಸುವಂತೆ ತೋಟಗಾರಿಕಾ ಇಲಾಖೆಯವರಿಗೆ ಸೂಚಿಸಿದ ಡಿಸಿ, ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಮನೆಗೆ ಆಹಾರ ಪದಾರ್ಥಗಳನ್ನು ನಿಗದಿತ ಸಮಯಕ್ಕೆ ವಿತರಣೆ ಮಾಡುವಂತೆ ಸಿಡಿಪಿಒಗಳಿಗೆ ಸೂಚಿಸಿದರು. ಅಂಗನವಾಡಿ ಕೇಂದ್ರಗಳಿಗೆ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಅನುದಾನದಲ್ಲಿ ಕಾಪೌಂಡ್ ಹಾಗೂ ನೀರಿನ ಸೌಲಭ್ಯ ಜತೆಗೆ ಅಗತ್ಯವಿರುವ ಮೂಲ ಸೌಕರ್ಯವನ್ನು ಕಲ್ಪಿಸುವಂತೆ ತಿಳಿಸಿದರು.
ಸಾಂತ್ವನ ಯೋಜನೆಯಡಿ ಕೌಟುಂಬಿಕ ಕಲಹದಲ್ಲಿ 1049 ಪ್ರಕರಣ ದಾಖಲಾಗಿದ್ದು, 757 ಪ್ರಕರಣ ಇತ್ಯರ್ಥಗೊಂಡಿದ್ದು, 292 ಪ್ರಕರಣ ಬಾಕಿ ಇರುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ಸಭೆಗೆ ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ರಾಕೇಶ್ ಕುಮಾರ್, ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಮಹಿಳೆಯ ಮೇಲೆ ದೈಹಿಕವಾಗಿ ಕಿರುಕುಳ ನೀಡುತ್ತಿದ್ದರೆ ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಠಾಣೆಗೆ ದೂರು ನೀಡಿ ಎಂದರಲ್ಲದೇ ಕೌಟುಂಬಿಕ ಕಲಹದಂತಹ ಪ್ರಕರಣಗಳಲ್ಲಿ ದೂರುದಾರರನ್ನು ಕರೆಸಿ ಸಮಾಲೋಚನೆ ನಡೆಸಿ ಇತ್ಯರ್ಥಗೊಳಿಸುವಂತೆ ಸೂಚನೆ ನೀಡಿದರು.
ವಿಧವಾಕೋಶಕ್ಕೆ ಸಂಬಂಧಪಟ್ಟಂತೆ ಸರ್ವೇ ಮಾಡಿಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ 63640 ವಿಧವೆಯರು ಇರುವ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ನಟರಾಜ್ ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಸಿಡಿಪಿಒ ಶ್ರೀಧರ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಖಿ ಒನ್ ಸ್ಟಾಪ್: ಸಖಿ ಒನ್ ಸ್ಟಾಪ್ ಸೆಂಟರ್‌ಯೋಜನೆಯಡಿ ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯಕೀಯ, ಕಾನೂನು ಸಲಹೆ, ಪೊಲೀಸ್ ನೆರವು ಒದಗಿಸಲಾಗುತ್ತಿದೆ. ಸ್ಥೈರ್ಯನಿಧಿ ಯೋಜನೆಯಡಿ ಅತ್ಯಾಚಾರ, ದೌರ್ಜನ್ಯ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತುರ್ತು ವೈದ್ಯಕೀಯ ಪರಿಹಾರವಾಗಿ 25 ಸಾವಿರ ರೂ.. ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ಸಭೆಗೆ ಮಾಹಿತಿ ನೀಡಿದರು.