

ತುಮಕೂರು: ಪ್ರಥಮ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಜಿಲ್ಲೆಗೆ ಕುಖ್ಯಾತಿ ತಂದಿಟ್ಟಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮಾ.9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆ ಮೇಲೆ ನಿಗಾವಹಿಸಿದೆ.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಪೂರ್ವಭಾವಿ ಸಭೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಗೆ ಉತ್ತೇಜನ ನೀಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿರುವ 35 ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪ್ರಶ್ನೆಪತ್ರಿಕೆ ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರು.
ಪರೀಕ್ಷೆಗೆ ಸಂಬAಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಿ.ಬಸವಲಿಂಗಪ್ಪ ಪರೀಕ್ಷೆ ಸಿದ್ಧತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ, ಡಿಎಚ್‌ಒ ಡಾ.ಮಂಜುನಾಥ್, ಉಪ ವಿಭಾಗಾಧಿಕಾರಿ ಎಚ್.ಶಿವಪ್ಪ ಮತ್ತಿತರರು ಇದ್ದರು.
ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 12889 ವಿದ್ಯಾರ್ಥಿಗಳು ಹಾಗೂ 14968 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 27857 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ.
24386 (10932 + 13454) ಹೊಸ ವಿದ್ಯಾರ್ಥಿಗಳು, 2925 (1718 + 1207) ಪುನರಾವರ್ತಿತ, 546 (239 + 307) ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 3578 ವಿದ್ಯಾರ್ಥಿಗಳು ಹಾಗೂ 5120 ವಿದ್ಯಾರ್ಥಿನಿಯರು ಸೇರಿದಂತೆ 8698, ವಾಣಿಜ್ಯ ವಿಭಾಗದಲ್ಲಿ 4008 ವಿದ್ಯಾರ್ಥಿಗಳು ಹಾಗೂ 5452 ವಿದ್ಯಾರ್ಥಿನಿಯರು ಸೇರಿದಂತೆ 9460, ಕಲಾ ವಿಭಾಗದಲ್ಲಿ 3346 ವಿದ್ಯಾರ್ಥಿಗಳು ಹಾಗೂ 2882 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 6228 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.