

ಉಡುಪಿ: ನಗರಸಭೆಯ 10ನೇ ಅವಧಿಗೆ ಅಧ್ಯಕ್ಷರಾಗಿ ಗುಂಡಿಬೈಲು ವಾರ್ಡಿನ ಬಿಜೆಪಿ ಸದಸ್ಯ ಪ್ರಭಾಕರ್ ಪೂಜಾರಿ ಹಾಗು ಉಪಾಧ್ಯೆಯಾಗಿ ಒಳಕಾಡು ವಾರ್ಡಿನ ಬಿಜೆಪಿ ಸದಸ್ಯೆ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಮಹೇಶ್ಚಂದ್ರ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು.
ನಗರಸಭೆ ಒಟ್ಟು 35 ಸದಸ್ಯ ಬಲ ಹೊಂದಿದ್ದು, ಬಿಜೆಪಿಯ 32 ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ 3 ಸದಸ್ಯರಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಚುನಾವಣಾ ಕಣದಿಂದ ದೂರ ಉಳಿದಿತ್ತು. ಶಾಸಕ ಯಶ್ಪಾಲ್ ಸುವರ್ಣ, ನಗರಸಭಾ ಪೌರಾಯುಕ್ತ ರಾಯಪ್ಪ, ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್ ಉಪಸ್ಥಿತರಿದ್ದರು.