

ಉಡುಪಿ: ಜಿಲ್ಲೆಯಲ್ಲಿ 18 ರಿಂದ 59 ವರ್ಷದೊಳಗಿನ ಅರ್ಹ 8 ಲಕ್ಷ ಸಾರ್ವಜನಿಕರು ಸೆಪ್ಟಂಬರ್ 30 ರವರೆಗೆ ಕೋವಿಡ್ ಮುಂಜಾಗ್ರತಾ ಡೋಸ್ ಪಡೆಯಬಹುದಾಗಿದ್ದು, ಪ್ರತಿದಿನ ಸರಾಸರಿ 11 ಸಾವಿರ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.
ಸೋಮವಾರ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲೆಯಲ್ಲಿ ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟ ವರಿಗೆ ಮೊದಲನೇ ಮತ್ತು 2 ನೇ ಡೋಸ್ ಲಸಿಕೆ ನೀಡುವಲ್ಲಿ ಶೇ. 100 ಸಾಧನೆ ಮಾಡಲಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿದೆ. ಸ್ವಲ್ಪ ದಿನದ ಬಳಿಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಸಿಕೆ ನೀಡಲು ಕ್ರಮ ವಹಿಸಲಾಗುವುದು ಎಂದರು.
ಸಾರ್ವಜನಿಕರು ಕೋವಿಡ್ 19 ಪ್ರಥಮ ಮತ್ತು 2 ನೇ ಡೋಸ್ ನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದಿದ್ದ ಕಾರಣ ಕೋವಿಡ್ 3 ನೇ ಅಲೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಕರಣಗಳು ಕಡಿಮೆಯಾಗಿದೆ. ಆದ್ದರಿಂದ ಸಂಭಾವ್ಯ ನಾಲ್ಕನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಪ್ಪದೇ ಮುನ್ನೆಚ್ಚರಿಕಾ ಡೋಸ್ ಪಡೆಯಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್ ವಂದಿಸಿದರು.
ಜಿಲ್ಲಾ ಕೋವಿಡ್ ಲಸಿಕಾ ಉಸ್ತುವಾರಿ ಡಾ.ಎಂ.ಜಿ.ರಾಮ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ. ಕೀರ್ತಿನಾಥ ಬಲ್ಲಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಉಪಸ್ಥಿತರಿದ್ದರು.