ಉಡುಪಿಯಲ್ಲಿ ಕಾರ್ಯ ನಿರ್ವಹಣೆ ಮರೆಯಲಾಗದ ಅನುಭವ: ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್

udp-14-dc sanmana
Published on

ಉಡುಪಿ: ಜಿಲ್ಲಾಧಿಕಾರಿಯಾಗಿ 1 ವರ್ಷ 10 ತಿಂಗಳ ಕಾಲ ಕಾರ್ಯನಿರ್ವಹಿಸಿದ್ದು ಮರೆಯಲಾಗದ ಅನುಭವ ನೀಡಿದೆ. ಜಿಲ್ಲೆಯ ಅಭಿವೃದ್ದಿಗಾಗಿ ಮುಂದಿನ ದಿನದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ತನ್ನಿಂದ ಅಗತ್ಯವಿರುವ ಸಹಕಾರ ನೀಡಲಾಗುವುದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲೇ ಸದಾ ಮಾದರಿ ಜಿಲ್ಲೆಯನ್ನಾಗಿ ಮಾಡುವ ತುಡಿತ ಜಿಲ್ಲೆಯ ಸಾರ್ವಜನಿಕರು ಮತ್ತು ನೌಕರರ ವಲಯದಲ್ಲಿದೆ. ಈ ಸ್ಪೂರ್ತಿ ಸದಾ ಕಾಲ ಇದೇ ರೀತಿ ಮುಂದುವರೆಯಬೇಕು. ಎಲ್ಲರ ಸಹಕಾರದಿಂದ ಒಂದು ತಂಡದ ರೀತಿಯಲ್ಲಿ ಜಿಲ್ಲೆಯ ಪ್ರಗತಿಗೆ ಕಾರ್ಯನಿರ್ವಹಿಸಲು ಸಾದ್ಯವಾಯಿತು ಎಂದರು.

ಅಧ್ಯಕ್ಷತೆ ವಹಿಸಿದ್ದ ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿ, ವಿದ್ಯಾವಂತ ಮತ್ತು ಬುದ್ದಿವಂತರ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲಿನ ಹಲವು ಸವಾಲುಗಳನ್ನು ಜಿಲ್ಲಾಧಿಕಾರಿಯಾಗಿದ್ದ ಕೂರ್ಮಾರಾವ್ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಮತ್ತು ಪ್ರಾಮಾಣಿಕ ಸೇವೆ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಇಲಾಖೆಗಳಾದ ಕಂದಾಯ, ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಗಳು ಪರಸ್ಪರ ಪೂರಕವಾಗಿ ಕೆಲಸ ಮಾಡಬೇಕಿದೆ. ಒಂದು ತಂಡವಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ಪ್ರಗತಿಗೆ ಒಟ್ಟಾಗಿ ಶ್ರಮಿಸೋಣ ಎಂದರು.

ಜಿ.ಪಂ. ಸಿಇಓ ಪ್ರಸನ್ನ ಮಾತನಾಡಿದರು. ಎಸ್ಪಿ ಅಕ್ಷಯ್ ಎಂ ಹಾಕೆ ಮಾತನಾಡಿದರು. ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಿಎಫ್ ಆಯುಕ್ತ ಅಭಿಷೇಕ್ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಸ್ವಾಗತಿಸಿದರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net