

ಉಡುಪಿ: ಜಿಲ್ಲೆಯಲ್ಲಿ ಏ. 5 ರಂದು ಡಾ.ಬಾಬು ಜಗಜೀವನರಾಂ 118 ನೇ ಜಯಂತಿ ಹಾಗೂ ಏ. 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ಪ್ರತಿಭಾನ್ವಿತ ನಿಲಯಾರ್ಥಿಗಳು, ನಗರಸಭೆಯ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು. ಅಂತರ್ ಜಾತಿ ವಿವಾಹವಾದ ಮೂವರು ದಂಪತಿಗೆ ಪ್ರೋತ್ಸಾಹಧನ ವಿತರಿಸಲಾಗುವುದು ಎಂದರು.
ಎಲ್ಲ ತಾಲೂಕು ಕಚೇರಿ, ಶಾಲಾ-ಕಾಲೇಜು, ಗ್ರಾಮ ಪಂಚಾಯತಿ ಹಾಗೂ ಇತರೆ ಕಚೇರಿಗಳಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಯನ್ನು ಕಡ್ಡಾಯವಾಗಿ ಆಚರಿಸಬೇಕು. ಡಾ.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಶಾಲಾ, ಕಾಲೇಜು ಹಂತದಲ್ಲಿ ಭಾಫಿಣ, ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಅರುಣ್ ಕೆ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಎಂ. ಮತ್ತಿತರರು ಉಪಸ್ಥಿತರಿದ್ದರು.
ಜನ್ಮ ದಿನಾಚರಣೆ
ಏಪ್ರಿಲ್ 5 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ 118 ನೇ ಜನ್ಮ ದಿನಾಚರಣೆ ಹಾಗೂ ಏ. 14 ರಂದು ಬೆಳಗ್ಗೆ 10 ಕ್ಕೆ ನಗರದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಬುದ್ಧ ವಂದನೆ ಕಾರ್ಯಕ್ರಮ ಆಯೋಜಿಸಲಾಗಿದೆ.