ಮಳೆಯಿಂದ ಹಾಳಾದ ರಸ್ತೆ ದುರಸ್ತಿ ತ್ವರಿತಗೊಳಿಸಿ

udp-1-sindhuri
Published on

ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ. ವಿ.ಎಸ್​. ಆಚಾರ್ಯ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ ಮುನ್ಸೂಚನೆ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಒದಗಿಸಬೇಕು. ಮೀನುಗಾರರು ಕಡ್ಡಾಯವಾಗಿ ಲೈಫ್​ ಜಾಕೆಟ್​ಗಳನ್ನು ಬಳಸುವಂತೆ ಮನವೊಲಿಸಬೇಕು. ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದಲ್ಲಿ ಮೀನುಗಾರಿಕೆಗೆ ಹೋಗದಂತೆ ಎಚ್ಚರವಹಿಸಬೇಕು ಎಂದರು.

ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆಯನ್ನು ರೂಪಿಸಬೇಕು. ನೂತನ ಹೆಜಮಾಡಿ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೈಗೊಂಡಿರುವ ಕಾಲುಸಂಕ ನಿಮಾರ್ಣ ಕಾಮಗಾರಿಗಳನ್ನು ಮಳೆ ಕಡಿಮೆಯಾದ ಕೂಡಲೇ ಪುನರಾರಂಭಿಸಿ, ಶ್ರೀದಲ್ಲಿ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು. ಜಲಜೀವನ್​ ಮಿಷನ್​ ಅಡಿಯಲ್ಲಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮನೆ&ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ 525 ನಳ ಸಂಪರ್ಕ ಕಾಮಗಾರಿಗಳಲ್ಲಿ 487 ಪೂರ್ಣಗೊಳಿಸಲಾಗಿದ್ದು, ಪ್ರಗತಿಯಲ್ಲಿರುವ 38 ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net