

ಉಡುಪಿ: ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳು ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ಈ ಕಟ್ಟಡಗಳ ಗುಣಮಟ್ಟ ಹಾಗೂ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು. ಈಗಾಗಲೇ ಕೈಗೊಂಡಿರುವ ದುರಸ್ಥಿ ಕಾರ್ಯಗಳನ್ನು ವಾರದ ಅಂತ್ಯದ ಒಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ ನೀಡಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೊರ ಜಿಲ್ಲೆಗಳಿಂದ ಬರುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಡಲ ತೀರಗಳಲ್ಲಿ ಎಚ್ಚರಿಕೆಯ ಸೂಚನಾ ಫಲಕಗಳನ್ನು ಅಳವಡಿಸಬೇಕು. ಪ್ರವಾಸಿ ರಕ್ಷಣಾ ಸಿಬ್ಬಂದಿ ನೇಮಕ ಮಾಡಬೇಕು. ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ಗುರುತಿಸಿ, ಶೀಘ್ರದಲ್ಲಿಯೇ ತೆರವುಗೊಳಿಸಬೇಕು. ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗುವುದನ್ನು ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಮಟ್ಟದಲ್ಲಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ಸಭೆಗಳನ್ನು ಮಾಡಿ ಪೂರ್ವ ಸಿದ್ದತೆ ನಡೆಸಿ, ತೊಂದರೆಗೊಳಗಾದವರಿಗೆ ತಕ್ಷಣದಲ್ಲಿ ಸ್ಪಂದಿಸಲು ಮುಂದಾಗಬೇಕು. ಪ್ರತೀ ತಾಲೂಕಿನಲ್ಲಿಯೂ ಪ್ರಕೃತಿ ವಿಕೋಪ ಎದುರಿಸುವ ಬಗ್ಗೆ ಅಣುಕು ಪ್ರದರ್ಶನ ಅಭ್ಯಾಸಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ಸುರಕ್ಷಿತಾ ಪರಿಕರಗಳ ಉಪಯೋಗದ ಬಗ್ಗೆಯೂ ಮಾಹಿತಿ ನೀಡಬೇಕು ಎಂದರು.
ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ನಗರ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚರಂಡಿ ಹಾಗೂ ತೋಡುಗಳನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಇರುವ ತೆರೆದ ಕೆರೆಗಳು ಹಾಗೂ ನೀರಿನ ಗುಂಡಿಗಳ ಸುತ್ತ ತಡೆಬೇಲಿ ಹಾಕಿಸಿ, ಎಚ್ಚರಿಕಾ ಫಲಕಗಳನ್ನು ಅಳವಡಿಸಬೇಕು ಎಂದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರಿನಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಬೀದಿ ದೀಪಗಳನ್ನು ಅಳವಡಿಸಬೇಕು, ಕೆಲವು ಭಾಗಗಳಲ್ಲಿ ಮಣ್ಣು ಕುಸಿತಗಳಾಗುತ್ತವೆ. ಈ ಬಗ್ಗೆ ಎಚ್ಚರವಹಿಸಬೇಕು. ಸಾರ್ವಜನಿಕ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಬೇಕು ಎಂದರು.
38,000 ಹೆಕ್ಟೇರ್ ಪ್ರದೇಶದಲ್ಲಿ ಭಿತ್ತನೆ ವಿಸ್ತಿರ್ಣದ ಗುರಿ ಹೊಂದಲಾಗಿದೆ. ರೈತರಿಗೆ ಅಗತ್ಯವಿರುವ ಭಿತ್ತನೆ ಬೀಜದ ದಾಸ್ತಾನು ಇಟ್ಟುಕೊಂಡು ಯಾವುದೇ ರೀತಿಯ ಕೊರತೆಯಾಗದಂತೆ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಮಳೆ ಗಾಳಿಯಿಂದ ವಿದ್ಯುತ್ ಕಂಬಗಳು ಹಾಗೂ ಪ್ರಸರಣ ತಂತಿಗಳು ಹಾನಿ ಉಂಟಾದಾಗ ಕೂಡಲೇ ದುರಸ್ತಿ ಕಾರ್ಯಗಳನ್ನು ಕೈಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ಮದನ್ ಮೋಹನ್ ಮೊದಲಾದವರು ಉಪಸ್ಥಿತರಿದ್ದರು.