ಭಾರಿ ಮಳೆಗೆ ತತ್ತರಿಸಿದ ಉಡುಪಿ, ಹಲವು ಮನೆಗಳು ಜಲಾವೃತ

Udupi Rain
Published on

ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ತತ್ತರಿಸಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು. ಉಡುಪಿ ನಗರ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ.

ಶನಿವಾರ ಬೆಳಿಗ್ಗೆಯಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಉಡುಪಿಯ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.

ಉಡುಪಿ ಗುಂಡಿಬೈಲು, ಅಂಬಲಪಾಡಿ, ಮಠದ ಬೆಟ್ಟು, ಬೈಲಕೆರೆ ನಿಟ್ಟೂರು ಕೊಡಂಕೂರು ಚಿಟ್ಪಾಡಿ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದ್ದು 4 ದಶಕಗಳ ಬಳಿಕ ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ನೆರೆ ಉಂಟಾಗಿದೆ. ತಗ್ಗು ಪ್ರದೇಶದಲ್ಲಿ ಸಿಕ್ಕಿಬಿದ್ದವರನ್ನು ರಕ್ಷಿಸಿದ ಅಗ್ನಿಶಾಮಕ ದಳ,‌ ಪೊಲೀಸ್ ಸಿಬ್ಬಂದಿಗಳು ದೋಣಿಯಲ್ಲಿ ರಕ್ಷಣೆ ಕಾರ್ಯಚರಣೆ ‌ನಡೆಸುತ್ತಿದ್ದಾರೆ.

ಭೀಕರ ಮಳೆಯ ಪರಿಣಾಮ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಆವರಣ, ನಗರದ ರಾಷ್ಟ್ರೀಯ ಹೆದ್ದಾರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು. ನಗರದ ಅಂಗಡಿ ಗೋದಾಮುಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಭಾರಿಯ ಮಳೆಯ ಪರಿಣಾಮ ಸ್ವರ್ಣ, ಸೀತನದಿ ಉಕ್ಕಿ ಹರಿಯುತ್ತಿದೆ. ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಪುತ್ತಿಗೆ ಭಾಗದಲ್ಲಿ ಕೃತಕ ನೆರೆಯಿಂದಾಗಿ ಮನೆಗಳು ಸಂಪೂರ್ಣ ಜಲಾವೃತವಾಗಿದ್ದು ಮನೆಯೊಳಗೆ ನೀರು ನುಗ್ಗಿ ಗೋಡೆ ಕುಸಿದ ಘಟನೆ ಸಂಭವಿಸಿದೆ.

ಈಗಾಗಲೇ ಬಂಗಾಳ ಉಪಸಾಗರದಲ್ಲಿ ಸೆ.20ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯ ಪರಿಣಾಮ ರಾಜ್ಯದಲ್ಲಿ ಸೆ. 22ರವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ 'ರೆಡ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.20ರಿಂದ 22ರವರೆಗೆ ಗುಡುಗು ಸಹಿತ ಭಾರೀ ಮಳೆ ನಿರೀಕ್ಷೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net