ಬೂತ್​ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಭೆ

udp-4-congress
Published on

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಬಹಳಷ್ಟು ಅನುಕೂಲವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 50 ಸಾವಿರದಿಂದ 1 ಲಕ್ಷ ಫಲಾನುಭವಿಗಳಿದ್ದಾರೆ. ಹೀಗಾಗಿ ಬೂತ್​ ಮಟ್ಟದಲ್ಲಿ ಫಲಾನುಭವಿಗಳ ಸಭೆ ನಡೆಸಿ, ಕಾಂಗ್ರೆಸ್​ ಪಕ್ಷವನ್ನು ಬೆಂಬಲಿಸುವಂತೆ ಕೇಳೋಣ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್​ ಸಮಿತಿ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್​ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿ ರಾಜ್ಯದಲ್ಲಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಮಹಿಳೆಯರಿಗಾಗಿ ಯಾವುದೇ ಯೋಜನೆಯನ್ನು ಜಾರಿ ಮಾಡಿಲ್ಲ. ಈ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸು ಅಗತ್ಯವಿದೆ. ಬಿಜೆಪಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ವಿಷಬೀಜ ಬಿತ್ತುತ್ತಿದ್ದು, ಸಮಾಜದಲ್ಲಿ ಸೌಹಾರ್ದತೆ ಬೆಳೆಸುವುದು ಕಾಂಗ್ರೆಸ್​ ಜವಾಬ್ದಾರಿ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಶೇಕಡ 50ರಷ್ಟು ಇರುವ ಮಹಿಳೆಯರು ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು, ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ಇದೆ. ಹೀಗಾಗಿ ಬ್ಲಾಕ್​ ಮಟ್ಟದಲ್ಲಿ ಮಹಿಳಾ ಕಾಂಗ್ರೆಸ್​ ಸಮಿತಿಗಳನ್ನು ಶೀಘ್ರದಲ್ಲಿ ರಚಿಸಬೇಕು. ಇದರಿಂದ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ. ಪಕ್ಷಕ್ಕೂ ಉತ್ತಮ ಮಹಿಳಾ ಅಭ್ಯರ್ಥಿಗಳು ಲಭ್ಯವಾಗುತ್ತಾರೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್​ ಸಮಿತಿ ನೂತನ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣಹೆಬ್ಬಾರ್​ ನಿಕಟ ಪೂರ್ವ ಅಧ್ಯಕ್ಷ ಗೀತಾ ವಾಗ್ಲೆ ಅವರಿಂದ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ಅಶೋಕ ಕುಮಾರ್​ ಕೊಡವೂರು, ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್​ ಕುಮಾರ್​ ಸೊರಕೆ, ಮಾಜಿ ಸಂಸದ ಕೆ.ಜಯಪ್ರಕಾಶ್​ ಹೆಗ್ಡೆ, ಮುಖಂಡರಾದ ಎಂ.ಎ. ಗಫೂರ್​, ಪ್ರಸಾದ್​ ರಾಜ್​ ಕಾಂಚನ್​, ದಿನೇಶ್​ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಶೆಟ್ಟಿ, ರಮೇಶ್​ ಕಾಂಚನ್​, ಲಾವಣ್ಯ ಬಳ್ಳಾಳ್​, ದಿನಕರ ಹೇರೂರು, ಮಮತಾ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net