

ಉಡುಪಿ: ಜನವರಿಯಲ್ಲಿ ಜರುಗಲಿರುವ ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ 8 ರಿಂದ 18 ರ ವರೆಗೆ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮವು ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ಆಗಮಿಸಲಿದ್ದು, ಜನಸಂದಣಿ ನಗರದಲ್ಲಿ ಹೆಚ್ಚಲಿದೆ. ಸ್ವಚ್ಛತೆ, ನೈರ್ಮಲ್ಯ, ರಸ್ತೆಗಳ ಸುಸ್ಥಿತಿ, ನೀರಿನ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕೆಂದರು.
ಸುಗಮ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಮೊಬೈಲ್ ಶೌಚಾಲಯಗಳನ್ನು ಅಲ್ಲಲ್ಲಿ ನಿರ್ಮಿಸಬೇಕು. ನಗರದ ಶುಚಿತ್ವಕ್ಕೆ ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಬೇಕು. ಪೊಲೀಸ್ ಇಲಾಖೆ ಬಂದೋಬಸ್ತ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಾಹನಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕೆಂದರು.
ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು, ಪ್ರತಿಯೊಂದು ವ್ಯವಸ್ಥೆಯ ಮೇಲುಸ್ತುವಾರಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ ನೀಡಿದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು. ಹೆಚ್ಚುವರಿ ಅಗ್ನಿಶಾಮಕ ವಾಹನಗಳನ್ನು ಪಕ್ಕದ ಜಿಲ್ಲೆಯಿಂದ ತರಿಸಿಕೊಳ್ಳಬೇಕು. ಮೆರವಣಿಗೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಪ್ರಚಾರ ಪಡಿಸುವ ಟ್ಯಾಬ್ಲೋಗಳು ಭಾಗವಹಿಸಬೇಕು ಎಂದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಡಿವೈಎಸ್ಪಿ ದಿನಕರ್, ನಗರಾಭಿವೃದ್ಧಿ ಕೋಶದ ಅಭಿಯಂತರ ಮೋಹನ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.