ಎಸ್.ಎಸ್.ಎಲ್.ಸಿ ಪರೀಕ್ಷೆಗೆ 13,753 ವಿದ್ಯಾರ್ಥಿಗಳು ನೋಂದಣಿ

UDP-24-SSLC Meet 1
Published on

ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,753 ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 55 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಸೂಚನೆ ನೀಡಿದರು.

ಶುಕ್ರವಾರ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೆಗ್ಯೂಲರ್, ಖಾಸಗಿ ಮತ್ತು ಪುನಾರಾವರ್ತಿತ ಸೇರಿದಂತೆ 7185 ಬಾಲಕರು ಮತ್ತು 6568 ಬಾಲಕಿಯರು ಸೇರಿದಂತೆ ಒಟ್ಟು 13753 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಬೈಂದೂರಿನಲ್ಲಿ 8, ಕುಂದಾಪುರದಲ್ಲಿ 9, ಕಾರ್ಕಳದಲ್ಲಿ 10, ಬ್ರಹ್ಮಾವರದಲ್ಲಿ 12 ಹಾಗೂ ಉಡುಪಿಯಲ್ಲಿ 16 ಸೇರಿದಂತೆ ಒಟ್ಟು 55 ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿ ಸ್ಮಾರ್ಟ್‌ವಾಚ್, ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡುವಂತೆ ಮತ್ತು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನವೇ ಪರಿಶೀಲಿಸುವಂತೆ ತಿಳಿಸಿದರು. ಪರೀಕ್ಷಾ ಕೇಂದ್ರಗಳಿಗೆ ಕಸ್ಟೋಡಿಯನ್‌ಗಳು, ಸ್ಥಾನಿಕ ಜಾಗೃತ ದಳ, ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನಿಯೋಜಿಸುವಂತೆ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳು ಮತ್ತು ವಾಪಾಸ್ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ತಿಳಿಸಿದರು.

ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗೊಂದಲಕ್ಕೀಡು ಮಾಡುವಂತಹ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶವನ್ನು ಸೆಕ್ಷನ್ 144 ರಂತೆ ನಿಷೇಧಾಜ್ಞೆ ವಿಧಿಸುವುದರ ಜೊತೆಗೆ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಡಿಡಿಪಿಐ ಗಣಪತಿ, ಸಹಾಯಕ ಖಜಾನಾಧಿಕಾರಿ ರೂಪಶ್ರೀ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಜಿಲ್ಲಾ ನೋಡೆಲ್ ಅಧಿಕಾರಿ ಸಿಪ್ರಿಯಾನ್ ಮೆಂಥಾರೋ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net