36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ನಿವಾಸಿ ನೂರುಲ್ಲ
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ನಿವಾಸಿ ನೂರುಲ್ಲ
Published on
ಉಡುಪಿ: ಸುಮಾರು 36 ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ವಾರೆಂಟ್​ ಆರೋಪಿಯನ್ನು ನಗರ ಠಾಣೆಯ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ನಿವಾಸಿ ನೂರುಲ್ಲ (66) ಬಂಧಿತ ಆರೋಪಿ. 1990ರ ಜೂನ್​ 21 ರಂದು ಉಡುಪಿ ನಗರ ಪೊಲೀಸ್​ ಠಾಣೆಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆಯಡಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮರುದಿನವೇ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಂಗ ಬಂಧನದ ಬಳಿಕ ಜಾಮೀನು ಪಡೆದು ಹೊರಬಂದ ನೂರುಲ್ಲ. ತದನಂತರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ದೀರ್ಘಕಾಲ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಲಯವು ಆರೋಪಿಯ ವಿರುದ್ಧ ವಾರೆಂಟ್​ ಹೊರಡಿಸಿತ್ತು. ಖಚಿತ ಮಾಹಿತಿಯ ಆಧಾರದ ಮೇಲೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರಿಗೆ ತೆರಳಿದ ಉಡುಪಿ ಪೊಲೀಸರ ತಂಡ, ಜೂನ್​ 22ರಂದು ಆರೋಪಿ ನೂರುಲ್ಲನನ್ನು ಯಶಸ್ವಿಯಾಗಿ ವಶಕ್ಕೆ ಪಡೆದುಕೊಂಡಿತು. 36 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಯನ್ನು ವಾರೆಂಟ್​ನೊಂದಿಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ದಶಕಗಳಿಂದ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಉಡುಪಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net