

ಉಡುಪಿ: ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ಕಡೆಯಿಂದ ಸುಮಾರು 1 ಕಿ.ಮೀ. ಸೇತುವೆ ಸಹಿತ ರಸ್ತೆಯನ್ನು ಡಿಸೆಂಬರ್ ಅಂತ್ಯದೊಳಗೆ ಮುಗಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.
ಎನ್ಎಚ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಶನಿವಾರ (ಅ.17) ಭೇಟಿ ನೀಡಿ ಪಾಡಿಗಾರ ವ್ಯಾಪ್ತಿಯ ಸುಮಾರು 1.3 ಕಿ.ಮೀ. ಅರಣ್ಯ ತೆರವು ಕಾರ್ಯಾಚರಣೆ ಪರಿಶೀಲಿಸಿದರು. ಈಗಾಗಲೇ ಅರಣ್ಯ ಇಲಾಖೆ ಅನುಮತಿ ನೀಡಿರುವುದರಿಂದ ಕಾಮಗಾರಿಗೆ ವೇಗ ನೀಡಬೇಕು ಎಂದು ತಾಕೀತು ಮಾಡಿದರು.
ಉಡುಪಿ ತಾಲೂಕಿನ ಆತ್ರಾಡಿಗೆ ಆಗಮಿಸಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಶೇಷ ತಿರುವು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳದಿಂದಲೇ ಜಿಲ್ಲಾಧಿಕಾರಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾದ ಮಂಜನ ಗೌಡ, ನವೀನ, ಶಶಿಧರ, ಶಿವಪುರ ಗ್ರಾಪಂನ ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ, ತಾಪಂ ಸದಸ್ಯರಾದ ರಮೇಶ ಪೂಜಾರಿ, ರತ್ನಾಕರ ಶೆಟ್ಟಿ ಆತ್ರಾಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಇದ್ದರು.