

ಉಡುಪಿ: ಬಾಲ್ಯವಿವಾಹದಿಂದ ಹೆಣ್ಣುಮಕ್ಕಳು ಹಲವು ಗಂಭೀರ ಸಮಸ್ಯೆ ಎದುರಿಸುವುದಲ್ಲದೆ, ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಧರಿಸುವ ಅಪಾಯವಿರುತ್ತದೆ. ಅವರ ಶಿಕ್ಷಣ ಅರ್ಧಕ್ಕೆ ಮೊಟಕಾಗಿ, ಕೌಟುಂಬಿಕ ಹಿಂಸಾಚಾರಕ್ಕೂ ಒಳಗಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅಭಿಯಾನದ ಮೂಲಕ ಅರಿವು ಮೂಡಿಸಬೇಕು. ಮಕ್ಕಳ ಹಕ್ಕು ಮತ್ತು ಭವಿಷ್ಯ ರಕ್ಷಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೊಳ್ಳಿ ಹೇಳಿದರು.
ಉಡುಪಿಯ ಜಿಪಂ ಕಚೇರಿಯಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ 100 ದಿನಗಳ ಕಾರ್ಯಕ್ರಮದ ಕ್ರಿಯಾ ಯೋಜನೆ ರೂಪಿಸುವ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ನ.27ರಂದು ಅಭಿಯಾನಕ್ಕೆ ಚಾಲನೆ
ದೇಶವನ್ನು ಬಾಲ್ಯ ವಿವಾಹ ಮುಕ್ತ ರಾಷ್ಟ್ರವನ್ನಾಗಿ ರೂಪಿಸಲು ಉಪಕ್ರಮದ ಭಾಗವಾಗಿ ಬಾಲ್ಯವಿವಾಹ ತಡೆಗಟ್ಟುವ ಹಾಗೂ ಹದಿಹರೆಯದ ಹೆಣ್ಣುಮಕ್ಕಳ ರಕ್ಷಣೆಗಾಗಿ ನ.27ರಂದು ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಮಕ್ಕಳ ರಕ್ಷಣಾ ಸಮಿತಿಗಳು ನಿರಂತರವಾಗಿ ಕಾರ್ಯನಿರ್ವಹಿಸಿ ಇಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕಬೇಕು ಎಂದರು.
ದೂರುಗಳಿಗೆ ತಕ್ಷಣ ಸ್ಪಂದಿಸಿ
ಅಭಿಯಾನದ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ದಾಖಲಿಸಲು ಕ್ರಮವಹಿಸಬೇಕು. ಬಾಲ್ಯ ವಿವಾಹ ಮುಕ್ತ ಭಾರತ ಪೋರ್ಟಲ್ ಮೂಲಕ ಕಾರ್ಯಕ್ರಮಗಳ ವರದಿ ದಾಖಲಿಸಬೇಕು. ತುರ್ತು ಸಂದರ್ಭಗಳಲ್ಲಿ ಮಕ್ಕಳ ಸಹಾಯವಾಣಿ 1098 ಅಥವಾ 112ಕ್ಕೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
ರೆನಿ ಪೀಟರ್ ಡಿಸೋಜಾ ಮಾತನಾಡಿದರು. ಸಭೆಯಲ್ಲಿ ಡಿಎಚ್ಒ ಡಾ. ಬಸವರಾಜ ಜಿ. ಹುಬ್ಬಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಡಿಪಿಒ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.