

ಉಡುಪಿ: ಭಾರತದ ಸಂವಿಧಾನವು ಕೇವಲ ರಾಜಕೀಯದ ಬಗ್ಗೆ ಆಸಕ್ತಿ ಇರುವವರಿಗೆ ಮಾತ್ರ ಸೀಮಿತವಾಗಿಲ್ಲ. ನಮ್ಮೆಲ್ಲರ ದಿನನಿತ್ಯದ ಜೀವನದಲ್ಲೂ ಸಂವಿಧಾನವು ಪ್ರಭಾವ ಬೀರುತ್ತಿದೆ. ಸಂವಿಧಾನಕ್ಕೆ ಬದ್ದವಾಗಿ ಸರ್ಕಾರ ಜನಪರವಾದ ಕಾನೂನುಗಳನ್ನು, ನೀತಿ-ನಿಯಮಾವಳಿಗಳನ್ನು ರೂಪಿಸುತ್ತವೆ. ಶಿಕ್ಷಣ, ಜ್ಞಾನ, ಉದ್ಯೋಗ ಎಲ್ಲಾ ಕ್ಷೇತ್ರಗಳಲ್ಲೂ ತಾರತಮ್ಯವಿಲ್ಲದ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಮಣಿಪಾಲ ಗಣಿತ ನಗರದಲ್ಲಿರುವ ಜ್ಞಾನಸುಧಾ ಕಾಲೇಜಿನಲ್ಲಿ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಆಶ್ರಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ವರ್ಗಗಳೂ ಸಮಾನ ಅವಕಾಶಗಳನ್ನು ಪಡೆದು ಮುಖ್ಯವಾಹಿನಿಯಲ್ಲಿ ಬೆರೆಯಲು ಸಹಾಯವಾಗುವಂತೆ ಮೀಸಲಾತಿ ನೀಡಲಾಗಿದೆ. ಆಚಾರ-ವಿಚಾರ, ಭಾಷೆ, ಜಾತಿ-ಮತ, ಆಹಾರ ಪದ್ದತಿಗಳಲ್ಲಿ ಭಿನ್ನತೆ ಇದ್ದರೂ, ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ್ದರೆ ಅದಕ್ಕೆ ನಮ್ಮ ಸಂವಿಧಾನವೇ ಕಾರಣ. ಜನಪ್ರತಿನಿಧಿಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೇ ಇದ್ದಲ್ಲಿ ಅವರನ್ನು ಮನೆಗೆ ಕಳುಹಿಸುವ ಅಧಿಕಾರವನ್ನೂ ಸಂವಿಧಾನವು ಜನರಿಗೆ ನೀಡಿದೆ ಎಂದರು.
ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಅರಿಯಬೇಕು. ಜನರ ಸಮಸ್ಯೆಗಳನ್ನು ಆಲಿಸಲು ಅವರ ಆಸೆ- ಆಕಾಂಕ್ಷೆಗಳನ್ನು ಪೂರೈಸಲು ಸಂವಿಧಾನವು ಅವಕಾಶ ನೀಡಿದ್ದು, ಮುಂದಿನ ದಿನಗಳಲ್ಲಿ ಬಹಳಷ್ಟು ಯುವಕರು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಬಹುದು, ಯುವ ಸಂಸತ್ ಕಾರ್ಯಕ್ರಮವು ಅದಕ್ಕೆ ವೇದಿಕೆಯಾಗಲಿ ಎಂದು ಹಾರೈಸಿದರು.
ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವದಲ್ಲಿಯೇ ಅತೀ ಹೆಚ್ಚು ಯುವ ಜನತೆಯನ್ನು ಹೊಂದಿರುವುದು ದೇಶ ಭಾರತ. 30 ಕೋಟಿಗೂ ಹೆಚ್ಚು ಯುವ ಶಕ್ತಿ ನಮ್ಮಲ್ಲಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಗುಣಮಟ್ಟದ ಶಿಕ್ಷಣವನ್ನು ಪಡೆಯುವುದರ ಜೊತೆಗೆ ಕ್ರೀಡೆ, ಕಲೆ ಸ್ಭೆರಿದಂತೆ ವ್ಮತ್ತಿತರ ಚಟುವಟಿಕೆಗಳಲ್ಲಿ ಭಾಗವಹಿಸುವುದರೊಂದಿಗೆ ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಸಮಾಜ ಸುಧಾರಣೆಗೆ ಶ್ರಮಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಸಂವಿಧಾನದ ಪೀಠಿಕೆ ಬೋದಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ ರಾವ್, ವಕೀಲರ ಸಂಘದ ಅಧ್ಯಕ್ಷ ರೇನಾಲ್ಡೋ ಪ್ರವಿಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ ವಂದಿಸಿದರು.