ಜನರಿಗೆ ತಲುಪಲಿ ಸರ್ಕಾರಿ ಯೋಜನೆ ಪ್ರಯೋಜನ

ಪ್ರಜಾಸೇವಾ ಆಂದೋಲನ
 ಪ್ರಜಾಸೇವಾ ಆಂದೋಲನವನ್ನು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಉದ್ಘಾಟಿಸಿದರು. ಪ್ರಮುಖರಾದ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೊ, ಪ್ರಶಾಂತ್ ರಾವ್, ರಜತ್ ಮುಡಾರು ಮೊದಲಾದವರು ಉಪಸ್ಥಿತರಿದ್ದರು.
ಪ್ರಜಾಸೇವಾ ಆಂದೋಲನವನ್ನು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಉದ್ಘಾಟಿಸಿದರು. ಪ್ರಮುಖರಾದ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೊ, ಪ್ರಶಾಂತ್ ರಾವ್, ರಜತ್ ಮುಡಾರು ಮೊದಲಾದವರು ಉಪಸ್ಥಿತರಿದ್ದರು.
Published on: 

ವಿಜಯವಾಣಿ ಸುದ್ದಿಜಾಲ ಕಾರ್ಕಳ

ಸರ್ಕಾರಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅಧಿಕಾರಿಗಳ ಮೂಲಕ ಮಾಹಿತಿ ಒದಗಿಸುವುದು ಹಾಗೂ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜಿಸಲಾಗಿದೆ. ಇದರಿಂದ ಸರ್ಕಾರಿ ಯೋಜನೆಗಳ ಪ್ರಯೋಜನ ಜನರಿಗೆ ಸುಲಭವಾಗಿ ತಲುಪಲಿದೆ ಎಂದು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ್ ಪೂಜಾರಿ ಹೇಳಿದರು.

ಬಜಗೋಳಿ ಮುಡಾರು ಗ್ರಾಪಂ ವ್ಯಾಪ್ತಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಶನಿವಾರ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದರು.

ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೊ, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್ ಮಾತನಾಡಿದರು. ನೂರಾರು ಸಾರ್ವಜನಿಕರು ವಿವಿಧ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಿದರು. ವಸತಿ, ನಿವೇಶನ ಸೇರಿದಂತೆ ವಿವಿಧ ಸೌಲಭ್ಯಗಳಿಗಾಗಿ 10ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾದವು. ರಸ್ತೆ, ಕುಡಿಯುವ ನೀರು ಹಾಗೂ ಮೂಲಸೌಕರ್ಯಗಳ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಗ್ರಾಪಂ ಮಾಜಿ ಸದಸ್ಯ ರಜತ್ ಮುಡಾರು ವಿಷಯ ಪ್ರಸ್ತಾಪಿಸಿ, ಮುಡಾರು ಗ್ರಾಮದ ಸರ್ವೇ ನಂಬರ್ 178ರ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಮುಕ್ತಿ ಕಲ್ಪಿಸಲು ಕಂದಾಯ ಮತ್ತು ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಬೇಕು. ಇದರಿಂದ ಹಲವು ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು. ಮುಡಾರು ಪಿಡಿಒ ವಿಶ್ವನಾಥ್ ಉಪಸ್ಥಿತರಿದ್ದರು.

ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ರೂಪಿಸಲಾಗಿದೆ.
ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೊ ತಹಸೀಲ್ದಾರ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net