

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಉಡುಪಿ ಮಿಷನ್ ಕಾಂಪೌಂಡ್ನ ಯುಬಿಎಂಸಿ ಆಡಿಟೋರಿಯಂನಲ್ಲಿ ಅ.31ರಂದು ಸಂಜೆ 6:30ಕ್ಕೆ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಸೀನ್ ಮಲ್ಪೆ ತಿಳಿಸಿದರು.
ಉಡುಪಿಯ ಪತ್ರಿಕಾ ಭವನದಲ್ಲಿ ಗುರುವಾರ (ಅ.29) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ತಲಾ 50 ಸಾವಿರ ರೂ. ನಗದು
ಸಾಮಾಜಿಕ ಹೋರಾಟಗಾರ, ನಟ ಪ್ರಕಾಶ ರಾಜ್ ಅವರಿಗೆ ಮಾನವ ರತ್ನ, ದುಬೈಯ ಉದ್ಯಮಿ ಹಿದಾಯತುಲ್ಲಾ ಅಬ್ಬಾಸ್ ಅವರಿಗೆ ಸೇವಾ ರತ್ನ, ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸುರೇಶ ಭಟ್ ಬಾಕ್ರಬೈಲ್ ಅವರಿಗೆ 'ಸೌಹಾರ್ದ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಫಲಕದೊಂದಿಗೆ ತಲಾ 50 ಸಾವಿರ ರೂ. ನಗದು ಪುರಸ್ಕಾರ ನೀಡಲಾಗುತ್ತಿದೆ. ಮುಹಮ್ಮದ್ ಯಾಸೀನ್ ಮಲ್ಪೆ ಆಶಯ ಮತ್ತು ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದರು.
ಸಾಧಕರಿಗೆ ಸನ್ಮಾನ
ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ಮಾತನಾಡಿ, ಸಾಮಾಜಿಕ ಕಾರ್ಯಕರ್ತರಾದ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ, ಹಿರಿಯ ಸಾಹಿತಿ ಬಿಪಿನ್ ಚಂದ್ರಪಾಲ ಕಾರ್ಕಳ, ಜೆರಾಲ್ಡ್ ಪಿಂಟೋ ಉಡುಪಿ, ಚಂದ್ರಶೇಖರ ಶೆಟ್ಟಿ ಕುಂದಾಪುರ, ಸಾಮಾಜಿಕ ಹೋರಾಟಗಾರ್ತಿ ಗೀತಾ ಸುರೇಶಕುಮಾರ ಬೈಂದೂರು, ಲೇಖಕಿ ಫಾತಿಮಾ ರಲಿಯಾ ಹೆಜಮಾಡಿ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದರು.
ಸಮಾರಂಭದಲ್ಲಿ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನ ಮುಖ್ಯ ಜಿಲ್ಲಾ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ದ.ಕ.- ಉಡುಪಿ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಗೌರವಾಧ್ಯಕ್ಷ ದಿವಾಕರ ಸನಿಲ್, ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಉಡುಪಿ ಸಹಬಾಳ್ವೆ ಸಂಚಾಲಕ ಪ್ರೊ.ಫಣಿರಾಜ, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಎಸ್ಡಿಪಿಐ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ ಕಲ್ಲಾಗರ, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಕೆ.ಅಶ್ರಫ್, ತೀರ್ಥಹಳ್ಳಿ ಮುಸ್ಲಿಂ ಒಕ್ಕೂಟದ ಹಾಜಿ ಸುಲೈಮಾನ್ ಸಾಹೇಬ್, ನಾರ್ತ್ ಕೆನರಾ ಮುಸ್ಲಿಂ ಯುನೈಟೆಡ್ ಫೋರಂನ ಇಮ್ತಿಯಾಝ್ ಅಹ್ಮದ್ ಉಮರ್ ಶೇಖ್ ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಕಾರ್ಯಕ್ರಮದ ಸಂಚಾಲಕ ಮೌಲಾನಾ ಝಮೀರ್ ಅಹ್ಮದ್ ರಶಾದಿ, ಸಹಸಂಚಾಲಕ ಪೀರು ಸಾಹೇಬ್, ಮಾಧ್ಯಮ ವಕ್ತಾರ ಇಕ್ಬಾಲ್ ಮನ್ನಾ ಉಪಸ್ಥಿತರಿದ್ದರು.