ಸುಬ್ರಹ್ಮಣ್ಯ: ದ.ಕ. ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಕಸ ಸಂಗ್ರಹವಾಗಿದ್ದು, ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ.
ರಾಜ್ಯದ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ರೈಲುಗಳ ಮೂಲಕ ಆಗಮಿಸುತ್ತಾರೆ. ಆದರೆ ರೈಲು ನಿಲ್ದಾಣದ ಆವರಣ ಹಾಗೂ ಅದರ ಸುತ್ತಮುತ್ತ ತುಂಬಿರುವ ಕಸದ ರಾಶಿ ಪ್ರಯಾಣಿಕರು ಹಾಗೂ ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.
ರೈಲು ನಿಲ್ದಾಣದ ಕೆಲವು ಭಾಗಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಆಹಾರದ ಅವಶೇಷಗಳು, ಬಾಟಲಿಗಳು ಹಾಗೂ ಇತರೆ ತ್ಯಾಜ್ಯಗಳು ಬಿದ್ದಿವೆ. ಮಳೆಗಾಲ ಆರಂಭವಾಗಿದ್ದು ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳು ಹಾಗೂ ಇತರ ಕೀಟಗಳ ಉತ್ಪತ್ತಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯ ಜನರು ದೂರಿದ್ದಾರೆ.
ಬಿಳಿನೆಲೆ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಕಡಬ ತಾಪಂ ಕಾರ್ಯನಿರ್ವಹಣಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಗ್ರಾಮಸ್ಥರು ಲಿಖಿತ ದೂರು ಸಲ್ಲಿಸಿದ್ದಾರೆ. ಸ್ವಚ್ಛತಾ ಕಾರ್ಯ ನಡೆಸಲಾಗಿದ್ದರೂ ಸಮಸ್ಯೆ ಪುನರಾವರ್ತನೆಯಾಗಿದೆ. ರೈಲ್ವೆ ಇಲಾಖೆ, ಗ್ರಾಪಂ ಹಾಗೂ ಜಿಲ್ಲಾ ಆಡಳಿತವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ನಿಲ್ದಾಣದ ಸುತ್ತಮುತ್ತಲಿನ ಪರಿಸರವನ್ನು ಸಂಪೂರ್ಣ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.